

ಸದೇಶ್ ಕಾರ್ಮಾಡ್ ಮೈಸೂರು
ಬಿಜೆಪಿ ನಗರ ಹಾಗೂ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಈ ಬಾರಿ ಸಾಕಷ್ಟು ಪೈಪೋಟಿ ಕಂಡುಬಂದಿದ್ದು, ಹಾಲಿ ಶಾಸಕರು, ಮಾಜಿ ಶಾಸಕರು ಹಾಗೂ ನಿಗಮ ಮಂಡಳಿಗಳ ಮಾಜಿ ಅಧ್ಯಕ್ಷರು ಅಧ್ಯಕ್ಷ ಸ್ಥಾನ ಪಡೆಯುವ ರೇಸ್‌ನಲ್ಲಿ ಇದ್ದಾರೆ.
ಮುಂಬರುವ ಲೋಕಸಭೆ ಹಾಗೂ ನಗರ ಪಾಲಿಕೆ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಪಕ್ಷವನ್ನು ಸದೃಢವಾಗಿ ಸಂಘಟಿ ಸುವ ಸಾಮರ್ಥ್ಯ ಹೊಂದಿರುವ ನಾಯಕರುಗಳನ್ನು ನಗರ ಹಾಗೂ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಲು ಪಕ್ಷದ ಹೈಕಮಾಂಡ್ ಈಗಾಗಲೇ ವೀಕ್ಷಕರ ಮೂಲಕ ವರದಿ ಪಡೆದುಕೊಂಡಿದ್ದು, ಒಂದೆರಡು ದಿನಗಳ ಒಳಗೆ ನಗರಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅರ್ಹ ವ್ಯಕ್ತಿಗಳನ್ನು ಹೈಕಮಾಂಡ್ ನೇಮಕ ಮಾಡುವ ಸಾಧ್ಯತೆ ಇದೆ.
ನಗರಾಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ವೀಕ್ಷಕರಾಗಿ ಬೈಂದೂರು ಶಾಸಕ ಗುರುರಾಜ್ ಬಂಡಿಹೊಳೆ, ಜಿಲ್ಲಾಧ್ಯಕ್ಷರ ನೇಮಕಕ್ಕೆ ಕರ್ನಾಟಕ ವಿದ್ಯುತ್ ಕಾರ್ಖಾನೆ (ಕವಿಕಾ) ಮಾಜಿ ಅಧ್ಯಕ್ಷ ತಮ್ಮೇಶ್‌ಗೌಡ ವೀಕ್ಷಕರಾಗಿ ಆಗಮಿಸಿ ಆಕಾಂಕ್ಷಿಗಳು ಹಾಗೂ ಪಕ್ಷದ ಹಿರಿಯ ಮುಖಂಡರ ಅಭಿಪ್ರಾಯವನ್ನು ಸಂಗ್ರಹಿಸಿ ಪಕ್ಷದ ಹೈಕಮಾಂಡ್‌ಗೆ ವರದಿ ನೀಡಿದ್ದಾರೆ. ಈ ವರದಿಯ ಆಧಾರದ ಮೇಲೆ ಸೂಕ್ತ ವ್ಯಕ್ತಿಗಳನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಲಾಗುವುದು.
ನಗರಾಧ್ಯಕ್ಷ ಸ್ಥಾನಕ್ಕೆ ಕೃಷ್ಣರಾಜ ಕ್ಷೇತ್ರದ ಶಾಸಕ, ಹಾಲಿ ನಗರಾಧ್ಯಕ್ಷರಾಗಿರುವ ಟಿ.ಎಸ್. ಶ್ರೀವತ್ಸ, ಚಾಮರಾಜ ಕ್ಷೇತ್ರದ ಮಾಜಿ ಶಾಸಕ ಎಲ್. ನಾಗೇಂದ್ರ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಯಶಸ್ವಿ ಸೋಮಶೇಖರ್, ನಗರ ಪಾಲಿಕೆ ಮಾಜಿ ಸದಸ್ಯ ಬಿ.ವಿ. ಮಂಜುನಾಥ್, ನಗರ ಪ್ರಧಾನ ಕಾರ್ಯದರ್ಶಿಗಳಾದ ಸೋಮಸುಂದರ್, ವಾಣೀಶ್, ಗಿರಿಧರ್, ಮಹಿಳಾ ಮೋರ್ಚಾ ನಗರಾಧ್ಯಕ್ಷೆ ಹೇಮಾ ನಂದೀಶ್, ಕೆ.ಆರ್. ಕ್ಷೇತ್ರದ ಉಪಾಧ್ಯಕ್ಷೆ ಸರ್ವಮಂಗಳಾ ಸೇರಿದಂತೆ ಹಲವರು ಆಕಾಂಕ್ಷಿಗಳಾಗಿದ್ದಾರೆ.
ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಮಾಜಿ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್‌ಗೌಡ, ಜನಪದ ವಿಶ್ವವಿದ್ಯಾಲಯ ಸಿಂಡಿಕೇಟ್ ಸಮಿತಿ ಮಾಜಿ ಸದಸ್ಯ, ಹಾಲಿ ಬಿಜೆಪಿ ಜಿಲ್ಲಾ ಸಹವಕ್ತಾರ ಡಾ.ಕೆ. ವಸಂತ ಕುಮಾರ್, ಕರ್ನಾಟಕ ಮೃಗಾಲಯ ಪ್ರಾಧಿಕಾರ ಮಾಜಿ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಕೃಷ್ಣಪ್ಪಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದೇವನೂರು ಪ್ರತಾಪ್, ಯೋಗಾನಂದ, ಮಹೇಶ್ ಮುಡವಾಡಿ ಸೇರಿದಂತೆ ಹಲವರು ಪೈಪೋಟಿಯಲ್ಲಿ ಇದ್ದಾರೆ.
ಮುಂಬರುವ ಲೋಕಸಭಾ ಚುನಾವಣೆ, ನಗರ ಪಾಲಿಕೆ ಚುನಾವಣೆಯನ್ನು ಗಮನಲ್ಲಿಟ್ಟುಕೊಂಡು, ಜಾತಿ ಲೆಕ್ಕಾಚಾರದ ಆಧಾರದ ಮೇಲೆ ಅಧ್ಯಕ್ಷ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ನೇಮಕ ಮಾಡಲು ಮಾಡಲು ಪಕ್ಷದ ಹೈಕಮಾಂಡ್ ಚಿಂತನೆ ನಡೆಸಿದೆ. ನಗರಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಬೇರೆ ಬೇರೆ ಸಮುದಾಯದವರನ್ನು ನೇಮಕ ಮಾಡಲು ಉದ್ದೇಶಿಸಲಾಗಿದೆ. ಒಂದೆರಡು ದಿನಗಳ ಒಳಗೆ ನಗರಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಅದಾದ ನಂತರ ಜ.14 ರೊಳಗೆ ನಗರ ಹಾಗೂ ಜಿಲ್ಲಾ ಘಟಕಗಳಿಗೆ ಪದಾಧಿಕಾರಿಗಳ ನೇಮಕ ಹಾಗೂ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ನೇಮಕ ಮಾಡಲು ಉದ್ದೇಶಿಸ ಲಾಗಿದೆ.
ನೂತನವಾಗಿ ನೇಮಕಗೊಳ್ಳುವ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ತಕ್ಷಣದಿಂದಲೇ ಲೋಕಸಭೆ ಹಾಗೂ ನಗರ ಪಾಲಿಕೆ ಚುನಾ ವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಮಹತ್ವದ ಜವಾಬ್ದಾರಿಯನ್ನು ನಿಭಾಯಿಸಬೇಕಾಗುತ್ತದೆ. ಮೈಸೂರು ಜಿಲ್ಲೆಯ ವಿವಿಧ ತಾಲೂಕುಗಳು ಮೈಸೂರು-ಕೊಡಗು, ಚಾಮರಾಜನಗರ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರಗಳಿಗೆ ಹಂಚಿಕೆಯಾಗಿದೆ. ಮೈಸೂರು-ಕೊಡಗು ಕ್ಷೇತ್ರದಲ್ಲಿ ಸತತ 2ನೇ ಬಾರಿ ಪ್ರತಾಪ್ ಸಿಂಹ ಗೆಲುವು ಸಾಧಿಸಿದ್ದು, ಚಾಮರಾಜನಗರ ಕ್ಷೇತ್ರವನ್ನು ಬಿಜೆಪಿಯ ವಿ. ಶ್ರೀನಿವಾಸ ಪ್ರಸಾದ್ ಪ್ರತಿನಿಧಿಸುತ್ತಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿ ಇದೀಗ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ರಾಜ್ಯಮಟ್ಟದಲ್ಲಿ ಲೋಕಸಭಾ ಚುನಾವಣೆಗೆ ಬಿಜೆಪಿ ಜೆಡಿಎಸ್‌ನೊಂದಿಗೆ ಚುನಾವಣಾ ಮೈತ್ರಿ ಮಾಡಿಕೊಂಡಿದ್ದು, ಈ ಮೈತ್ರಿಯ ಆಧಾರದ ಮೇಲೆ ಅಭ್ಯರ್ಥಿಗಳು ಅಂತಿಮಗೊಳ್ಳಲಿದ್ದಾರೆ. ಮೈತ್ರಿಕೂಟದಿಂದ ಅಭ್ಯರ್ಥಿ ಯಾರೇ ಆದರೂ ಗೆಲ್ಲಿಸುವ ಜವಾಬ್ದಾರಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಹೆಗಲೇರಲಿದೆ.
65 ಸದಸ್ಯ ಬಲದ ನಗರ ಪಾಲಿಕೆಯಲ್ಲಿ ಕಳೆದ ಬಾರಿ ಬಿಜೆಪಿ 22, ಕಾಂಗ್ರೆಸ್ 20, ಜೆಡಿಎಸ್ 17, ಬಿಎಸ್‌ಪಿ 1 ಹಾಗೂ ಐವರು ಪಕ್ಷೇತರ ಸದಸ್ಯರು ಗೆಲುವು ಸಾಧಿಸಿದ್ದರು. ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರು ಪೂರ್ಣಬಹುಮತ ಇಲ್ಲದೆ ಪ್ರಾರಂಭದಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು ಸಾಧ್ಯವಾಗಲಿಲ್ಲ. ಆದರೆ, ರಾಜಕೀಯ ತಂತ್ರಗಾರಿಕೆಯ ಮೂಲಕ ಅಂತಿಮ ಎರಡು ಅವಧಿಯ ಅಧಿಕಾರವನ್ನು ಜೆಡಿಎಸ್ ಸಹಕಾರದೊಂದಿಗೆ ಹಿಡಿಯುವಲ್ಲಿ ಬಿಜೆಪಿ ಯಶಸ್ವಿಯಾಯಿತು. ಈ ಬಾರಿ ಸ್ವತಂತ್ರವಾಗಿ ಅಧಿಕಾರದ ಗದ್ದುಗೆ ಹಿಡಿಯುವ ಸಂಕಲ್ಪವನ್ನು ಬಿಜೆಪಿ ಹೊಂದಿದ್ದು, ಇದಕ್ಕೆ ಪೂರಕವಾಗಿ ಕಾರ್ಯಕರ್ತರನ್ನು ಅಣಿಗೊಳಿಸುವ ಜಾವಾಬ್ದಾರಿ ನೂತನ ಅಧ್ಯಕ್ಷರ ಮೇಲಿದೆ.
ಅಲ್ಲದೆ, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಿಲ್ಲೆಯಲ್ಲಿ ದುರ್ಬಲಗೊಂಡಿದ್ದು, ಕಳೆದ ಬಾರಿ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಬಿಜೆಪಿ ಈ ಬಾರಿ ಗೆಲುವು ಸಾಧಿಸಲು ಸಾಧ್ಯವಾಗಿದ್ದು ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರ. ಹೀಗಾಗಿ ಪಕ್ಷವನ್ನು ತಳಮಟ್ಟದಿಂದ ಮತ್ತೆ ಸಂಘಟಿಸುವ ಜವಾಬ್ದಾರಿ ಪಕ್ಷದ ಮುಂದಿದ್ದು, ಇದಕ್ಕೆ ಸಮರ್ಥ ನಾಯಕತ್ವ ಹೊಂದಿರುವ ಸಾರಥಿಯ ಅವಶ್ಯಕತೆ ಇದೆ.