

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಿಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮುಂದಿನ ಮೂರು ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಹಳ್ಳಿ,ಕೆರೆ, ನದಿಗಳು ತುಂಬಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹಲವೆಡೆ ಭೂ ಕುಸಿತ ಸಹ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಒಂದು ವಾರದವರೆಗೆ ಅಥವಾ ಮಳೆ ಕಡಿಮೆಯಾಗುವವರೆಗೆ ಮುನ್ನೆಚ್ಚರಿಕೆ ಕ್ರಮವಹಿಸಲು ಸೂಚಿಸಲಾಗಿದೆ.
ಸಾರ್ವಜನಿಕರು, ಪ್ರವಾಸಿಗರು ನದಿಗಳಿಗೆ ಅಥವಾ ತಗ್ಗು ಪ್ರದೇಶಗಳಿಗೆ ತೆರಳದಂತೆ ಕಟ್ಟೆಚ್ಚರ ವಹಿಸಬೇಕು. ಸಾರ್ವಜನಿಕರು ಜಾನುವಾರುಗಳನ್ನು ಶುಚಿಗೊಳಿಸಲು ಅಥವಾ ಬಟ್ಟೆಗಳನ್ನು ತೊಳೆಯಲು ಹಳ್ಳಿ, ಕೆರೆ ಕಟ್ಟೆಗಳಿಗೆ ತೆರಳಬಾರದು. ಅತಿಯಾದ ಮಳೆಯಿಂದ ಧರೆ. ಗುಡ್ಡ ಕುಸಿತ ಉಂಟಾಗುವ ಸಂಭವವಿರುವುದರಿಂದ ಚಾರಣಿಗರು ಹಾಗೂ ಹೋಂ ಸ್ಟೇ, ರೆಸಾರ್ಟ್, ಅರಣ್ಯ ಇಲಾಖೆಯಿಂದ ಕೈಗೊಳ್ಳುವ ಟ್ರಕ್ಕಿಂಗ್ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಆಗಮಿಸುವ ಪ್ರವಾಸಿಗರು ಜಿಲ್ಲಾ ಪ್ರವಾಸವನ್ನು ಒಂದು ವಾರ ಮುಂದೂಡಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.
ಮೂಡಿಗೆರೆ ತಾಲೂಕಿನಲ್ಲೂ ಅಲರ್ಟ್: ಮೂಡಿಗೆರೆ ತಾಲೂಕಿನಲ್ಲಿ ಈಗಾಗಲೇ ಕಳೆದ ಮೂರು ದಿನಗಳಿಂದ ಗುಡುಗು, ಸಿಡಿಲು, ಗಾಳಿ ಸಹಿತ ಸತತವಾಗಿ ಮಳೆಯಾಗುತ್ತಿದ್ದು ಹಾಗೂ ರಾಜ್ಯ ಹವಾಮಾನ ಇಲಾಖೆ ನೀಡಿರುವ ಸೂಚನೆಯಂತೆ ಇನ್ನೂ ಮೂರು ದಿನ ತಾಲೂಕಿನಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಮೂಡಿಗೆರೆ ತಾಲೂಕು ತಹಸೀಲ್ದಾರ್ ತಿಳಿಸಿದ್ದಾರೆ.