

ಸಿದ್ದಾಪುರ : ಸಿದ್ದಾಪುರ ಸಮೀಪದ ಕರಡಿಗೋಡು ಕಾಫಿ ತೋಟವೊಂದರಲ್ಲಿ ಸೋಮವಾರ ಸಂಜೆ ಕೆಲಸ ಮಾಡುತ್ತಿದ್ದ ಕಾರ್ಮಿಕರಿಬ್ಬರ ಮೇಲೆ ಕಾಡಾನೆ ದಾಳಿ ನಡೆಸಿ ಗಾಯಗೊಳಿಸಿದೆ.
ಕರಡಿಗೋಡು ಗ್ರಾಮದ ಕಣ್ಣನ್ ಹಾಗೂ ಅಸ್ಸಾಂ ಮೂಲದ ಸಾಬುಅಲಿ ಇಬ್ಬರು ಕಾರ್ಮಿಕರು ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಡಾನೆಗಳು ಕರಡಿಗೋಡು ಗ್ರಾಮ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿದ್ದು ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ. ವಲಯ ಅರಣ್ಯಾಧಿಕಾರಿ ಶಿವರಾಮ್, ಉಪ ವಲಯ ಅರಣ್ಯ ಅಧಿಕಾರಿ ಸಂಜಿತ್ ಸೋಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಕರಡಿಗೋಡು ಗ್ರಾಮದಲ್ಲಿರುವ ಆನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇದೀಗ ಕಾರ್ಮಿಕರು ಅರಣ್ಯ ಇಲಾಖೆ ವಿರುದ್ಧ ತಿರುಗಿ ಬಿದಿದ್ದು ಪ್ರತಿಭಟನೆ ನಡೆಸಲು ಕಾರ್ಮಿಕ ಸಂಘಟನೆಗಳು ಸಜ್ಜಾಗಿವೆ. ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಹಾವಳಿಯಿಂದ ಕಾರ್ಮಿಕರು, ಬೆಳೆಗಾರರು, ಗ್ರಾಮಸ್ಥರು, ಶಾಲಾ ವಿದ್ಯಾರ್ಥಿಗಳು ಆತಂಕದಲ್ಲಿ ಸಂಚರಿಸುವಂತಾಗಿದೆ. ಕಾಡು ಪ್ರಾಣಿಗಳ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟದಿದ್ದಲ್ಲಿ ತೀವ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ರೈತ ಸಂಘ ಹಾಗೂ ಕಾರ್ಮಿಕ ಸಂಘಟನೆಗಳು ಎಚ್ಚರಿಸಿವೆ.