

ಹುಬ್ಬಳ್ಳಿ: ಇಲ್ಲಿಯ ಶ್ರೀ ಸಿದ್ಧಾರೂಢ ಸ್ವಾಮಿ ರೈಲ್ವೆ ನಿಲ್ದಾಣವನ್ನು ವಿಶ್ವದರ್ಜೆಯ ರೈಲ್ವೆ ನಿಲ್ದಾಣವನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಈ ಕುರಿತು ಕೇಂದ್ರ ಸರ್ಕಾರದ ಇದೇ ಅವಧಿಯಲ್ಲಿ ಅನುಮೋದನೆ ನೀಡಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.
ಶ್ರೀ ಸಿದ್ಧಾರೂಢ ಸ್ವಾಮಿ ರೈಲ್ವೆ ನಿಲ್ದಾಣದ ಪ್ಲಾಟ್ಫಾಮ್ರ್ ನಂ. 1ರಲ್ಲಿ 2.08 ಕೋಟಿ ರೂ. ವೆಚ್ಚದಲ್ಲಿ ಅಳವಡಿಸಿದ ಎರಡು ಎಸ್ಕಲೇಟರ್ (ಮೇಲಕ್ಕೆ ಏರಲು ಮತ್ತು ಕೆಳಕ್ಕೆ ಇಳಿಯಲು ತಲಾ ಒಂದು)ಗಳನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ಈ ರೈಲ್ವೆ ನಿಲ್ದಾಣವನ್ನು ವಿಮಾನ ನಿಲ್ದಾಣದ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಕೆಲವು ವರ್ಷಗಳ ಹಿಂದೆ ಇಲ್ಲಿ ಎರಡೂವರೆ ಪ್ಲಾಟ್ಫಾಮ್ರ್ ಇದ್ದವು. ಇಂದು 8 ಪ್ಲಾಟ್ಫಾಮರ್್ಗಳನ್ನು ಕಲ್ಪಿಸಲಾಗಿದೆ ಎಂದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಉನ್ನತೀಕರಣಕ್ಕೆ ನಿರಂತರವಾಗಿ ಪ್ರಯತ್ನಿಸಿದ ಪರಿಣಾಮ ಪ್ರಯಾಣಿಕರಿಗೆ ಸಾಕಷ್ಟು ಸೌಲಭ್ಯಗಳು ಕಲ್ಪಿಸಿದಂತಾಗಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಪಾಲಿಕೆಯ ಮೇಯರ್ ವೀಣಾ ಬರದ್ವಾಡ, ಪಾಲಿಕೆ ಸದಸ್ಯರಾದ ಸಂತೋಷ ಚವ್ಹಾಣ, ರಾಜಣ್ಣ ಕೊರವಿ, ಶಿವು ಮೆಣಸಿನಕಾಯಿ, ಬಿಜೆಪಿ ಮುಖಂಡ ಪ್ರಭು ನವಲಗುಂದಮಠ, ರಂಗಾ ಬದ್ದಿ, ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರ, ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಹರ್ಷ ಖರೆ, ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಸಂತೋಷ ಹೆಗಡೆ, ಹರಿತಾ ಎಸ್., ಇತರರು ಇದ್ದರು.