

ಶಿವಮೊಗ್ಗ: ಬಿಪಿಎಲ್ ಪಡಿತರ ಚೀಟಿ ವಿಚಾರದಲ್ಲಿ 2017ರಲ್ಲಿ ಹೊರಡಿಸಿರುವ ಆದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ಸೋಗಾನೆ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಉಮೇಶ್ ಕತ್ತಿ ಹೇಳಿಕೆ ಬಗ್ಗೆ ಚರ್ಚೆ ಅನಗತ್ಯ. 2017ರ ಆದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಈಗಾಗಲೇ ಸ್ಪಷ್ಟ ನಿರ್ದೇಶನ ನೀಡಿದ್ದೇನೆ. ಕಾನೂನು ಬಾಹಿರವಾಗಿ ಬಿಪಿಎಲ್ ಕಾರ್ಡ್ ಹೊಂದಿದ್ದರೆ ತಕ್ಷಣವೇ ಮರಳಿಸಬೇಕು. ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಉಪ ಚುನಾವಣೆಯಲ್ಲಿ ನಮ್ಮದೇ ಗೆಲುವು: ಬಸವ ಕಲ್ಯಾಣ, ಮಸ್ಕಿ ಸೇರಿ ಮೂರು ವಿಧಾನಸಭೆ ಉಪ ಚುನಾವಣೆ ಮತ್ತು ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವುದು ನೂರಕ್ಕೆ ನೂರರಷ್ಟು ಸತ್ಯ. ಇದರಲ್ಲಿ ಯಾವುದೇ ಅನುಮಾನಗಳು ಬೇಡ. ಈಗಾಗಲೇ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ. ಅಭ್ಯರ್ಥಿಗಳ ಆಯ್ಕೆಗೆ ವೀಕ್ಷಕರನ್ನು ನೇಮಕ ಮಾಡಲಾಗಿದ್ದು, ಶೀಘ್ರವೇ ಅಂತಿಮಗೊಳಿಸುವರು ಎಂದು ಸಿಎಂ ಹೇಳಿದರು.
ಮೀಸಲಾತಿಗೆ ಸಂಬಂಧಿಸಿದಂತೆ ಇತರರಿಗೆ ತೊಂದರೆ ಆಗದಂತೆ ಕಾನೂನಿನ ಚೌಕಟ್ಟಿನಲ್ಲಿ, ಸಂವಿಧಾನದ ಇತಿಮಿತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ಹೋರಾಟ, ಪಾದಯಾತ್ರೆ, ಸಮಾವೇಶಗಳಲ್ಲಿ ಕೆಲ ಮಂತ್ರಿಗಳೂ ಪಾಲ್ಗೊಳ್ಳುತ್ತಿರುವುದನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಎಲ್ಲದನ್ನೂ ಸರಿಪಡಿಸುತ್ತೇವೆ ಎಂದು ಹೇಳಿದರು.