ಹಣ ದ್ವಿಗುಣ ಆ್ಯಪ್‌ನಲ್ಲಿ 21 ಲಕ್ಷ ರೂ. ಕಳಕೊಂಡಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Suicide
Published on

ಬಂಟ್ವಾಳ: ಮಹಿಳೆಯೊಬ್ಬರು ಇಲ್ಲಿನ ಸಂಗಬೆಟ್ಟು ಸಮೀಪದ ಪುಚ್ಚಮೊಗರು ಎಂಬಲ್ಲಿ ಫಲ್ಗುಣಿ ನದಿಗೆ ಹಾರಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಹಣ ದ್ವಿಗುಣಗೊಳಿಸುವ ಆ್ಯಪ್‌ನಲ್ಲಿ 21 ಲಕ್ಷ ರೂ. ಹೂಡಿಕೆ ಮಾಡಿ, ಹಣ ಕಳೆದುಕೊಂಡಿದ್ದರು. ಈ ಬಗ್ಗೆ ಪೊಲೀಸ್ ಠಾಣೆಗೂ ದೂರು ನೀಡಿದ್ದರು.

ಕುಕ್ಕಿಪಾಡಿ ಗ್ರಾಮದ ಏರೋಡಿಯ ಜಾನ್ ಸಂತೋಷ್ ಡಿಸೋಜ ಅವರ ಪತ್ನಿ ವೀಟಾ ಮರಿನಾ ಡಿಸೋಜ(32) ಮೃತ ಮಹಿಳೆ. ಮಕ್ಕಳು ಇಲ್ಲ ಎಂಬ ಕೊರಗಿನ ಜತೆಗೆ ಆರ್ಥಿಕ ಸಂಕಷ್ಟದಿಂದ ಅವರು ಕೈಗೊಂಡ ದುಡುಕಿನ ನಿರ್ಧಾರದಿಂದ ಕ್ರಿಸ್‌ಮಸ್ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಸೂತಕದ ಛಾಯೆ ಆವರಿಸಿದೆ.

ವೀಟಾ ಅವರು ಶನಿವಾರ ರಾತ್ರಿ 9 ಗಂಟೆಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದರು. ಬಳಿಕ ನಾಪತ್ತೆಯಾಗಿದ್ದರು. ಆ ಬಳಿಕ ವಿಷಯ ತಿಳಿದು ಸ್ಥಳೀಯರು ಹುಡುಕಾಟ ನಡೆಸಿದಾಗ ಫಲ್ಗುಣಿ ಸೇತುವೆಯಲ್ಲಿ ಇವರ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಅಗಿಶಾಮಕದಳದ ಸಿಬ್ಬಂದಿ ನದಿಯಲ್ಲಿ ಹುಡುಕಾಡಿದ್ದರು. ಬಹುಗ್ರಾಮ ಕುಡಿಯುವ ನೀರು ಪೂರೈಕೆಗಾಗಿ ನಿರ್ಮಿಸಿರುವ ಅಣೆಕಟ್ಟೆ ಬಳಿ ಭಾನುವಾರ ಮೃತದೇಹ ಪತ್ತೆಯಾಗಿದೆ.

ಈ ಹಿಂದೆ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದ ವೀಟಾ ಬಳಿಕ ಹುದ್ದೆ ತೊರೆದು ವಿಮಾ ಪ್ರತಿನಿಧಿಯಾಗಿದ್ದರು. ಬಂಟ್ವಾಳ ಗ್ರಾಮಾಂತರ ಠಾಣೆ ಮಹಿಳಾ ಎಸ್‌ಐ ಭಾರತಿ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ, ಮಹಜರು ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net