ಎಸ್ ಪಿ ಕಚೇರಿಯಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

crime
Published on

ರಾಮನಗರ: ತನ್ನನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆಂದು ಯುವಕನೊಬ್ಬನ ವಿರುದ್ಧ ಆರೋಪ ಮಾಡಿದ್ದ ಮಹಿಳೆಯೊಬ್ಬರು, ಪ್ರಕರಣಕ್ಕೆ ಸಂಬಂಧಿಸಿದಂತೆ  ನ್ಯಾಯ ಕೇಳಿಕೊಂಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ಮಾಡಲು ಬಂದು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೋಮವಾರ ನಡೆದಿದೆ.

 ಮಾಗಡಿಯ ಉಮಾದೇವಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಪೊಲೀಸರು ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ಸೇರಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮಧ್ಯಾಹ್ನ ಕಚೇರಿಗೆ ಬಂದಿದ್ದ ಮಹಿಳೆ, ಎಸ್‌ಪಿ ಕಾರ್ತಿಕ್ ರೆಡ್ಡಿ ಅವರನ್ನು ಭೇಟಿ ಮಾಡಿದ್ದರು. ಕಚೇರಿಯಿಂದ ಹೋಗುವಾಗ ಮಹಿಳೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಅವರ ಜೊತೆ ಬಂದಿದ್ದ ವಕೀಲರೊಬ್ಬರು ಹೇಳಿದರು. 

ಮುಂಜಾಗ್ರತಾ ಕ್ರಮವಾಗಿ ಸಿಬ್ಬಂದಿ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಮಹಿಳೆ ಎಲ್ಲಿ ವಿಷ ಕುಡಿದರು ಎಂಬ ಮಾಹಿತಿ ಇಲ್ಲ ಎಂದು ಪೊಲೀಸರು ತಿಳಿಸಿದರು. 

 ವಿಷ ಸೇವನೆ ಬಗ್ಗೆ ಸರಿಯಾದ ಮಾಹಿತಿ ಇಲ್ಲದ ಕಾರಣ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ವಿಕ್ಟೋರಿಯಾ ಆಸ್ಪತ್ರೆಗೆ ಕಳಿಸಲಾಗಿದೆ ಎಂದು ಜಿಲ್ಲಾಸ್ಪತ್ರೆ ವೈದ್ಯರು ತಿಳಿಸಿದರು. 

 ಮಹಿಳೆ ದಯಾನಂದ ಎಂಬ ಯುವಕನ ವಿರುದ್ಧ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ, ಮಹಿಳಾ ಪೊಲೀಸ್ ಠಾಣೆಯಲ್ಲಿ ಏಪ್ರಿಲ್‌ನಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆದು ಆರೋಪಪಟ್ಟಿ ಸಲ್ಲಿಸಲಾಗಿದೆ. ಪ್ರಕರಣ ಕೋರ್ಟ್‌ ಮೆಟ್ಟಿಲೇರಿರುವ ಹೊತ್ತಿನಲ್ಲಿ ಆತ್ಮಹತ್ಯೆ ಯತ್ನ ಮಾಡಿದ್ದಾರೆ. ತನ್ನ ಪ್ರಕರಣದ ವಿಷಯದಲ್ಲಿ ಪೊಲೀಸರು ನ್ಯಾಯ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ದೂರಿದ್ದ ಮಹಿಳೆ, ನ್ಯಾಯ ಕೋರಿ ಜುಲೈ ತಿಂಗಳಲ್ಲಿ ಪೊಲೀಸರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net