

ಚನ್ನರಾಯಪಟ್ಟಣ: ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಕೊಡುಗೆ ಅಪಾರ. ಸ್ತ್ರೀಯರು ಪ್ರತಿಯೊಂದು ರಂಗದಲ್ಲೂ ಸಾಧನೆ ಮಾಡಿ ಸಮಾಜದ ಕೈಗನ್ನಡಿಯಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಅರಣಾ ಕುಮಾರಿ ತಿಳಿಸಿದರು.
ಪಟ್ಟಣದ ಸುಮಿತ್ರಾ ಕೆಂಬಾಳು ಪ್ರಕಾಶ್ ಕನ್ವೆನ್ಷನ್ ಹಾಲ್‌ನಲ್ಲಿ ಇತ್ತೀಚೆಗೆ ಚನ್ನರಾಯಪಟ್ಟಣ ರೋಟರಿ ಕ್ಲಬ್ ವಿಷನ್ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾರತೀಯ ಸಂಸ್ಕೃತಿ, ಪರಂಪರೆ ಜತೆಗೆ ಮಾನವೀಯ ಮೌಲ್ಯಗಳನ್ನು ಮಕ್ಕಳಿಗೆ ತಿಳಿಸಿಕೊಡುವ ಜವಾಬ್ದಾರಿ ತಾಯಂದಿರ ಮೇಲಿದೆ. ಉತ್ತಮ ಕುಟುಂಬ, ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಹಿರಿದು. ತಾಯಿ ತನ್ನ ಮಗುವಿಗೆ ಉತ್ತಮ ಸಂಸ್ಕಾರ ಕಲಿಸಿಕೊಟ್ಟಲ್ಲಿ ಮಾತ್ರ ಸುಂದರ ಸಮಾಜ ಸೃಷ್ಟಿಯಾಗಲಿದೆ. ಹೆಣ್ಮಕ್ಕಳು ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಸ್ವಯಂ ಉದ್ಯೋಗ ಕೈಗೊಂಡು ಸ್ವಾವಲಂಬಿ ಆಗುತ್ತಿದ್ದಾರೆ. ಕುಟುಂಬದ ಜವಾಬ್ದಾರಿ ಜತೆಗೆ ವೃತ್ತಿ ಸಂಬಂಧ ಜವಾಬ್ದಾರಿಗಳನ್ನೂ ನಿಭಾಯಿಸುತ್ತಿದ್ದಾರೆ ಎಂದರು.
ಮಹಿಳೆಯನ್ನು ಅಬಲೆ ಎನ್ನುವ ಕಾಲ ಹೋಗಿದೆ. ಕೌಟುಂಬಿಕ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಯಶಸ್ವಿಯಾಗಿ ನಿಭಾಯಿಸುವ ಶಕ್ತಿ ಮಹಿಳೆಯರಿಗಿದೆ. ಮಹಿಳೆ ಭೂಮಿಯಂತೆ ತ್ಯಾಗಮಯಿ. ಭಾರತೀಯ ಸಂಸ್ಕೃತಿಯ ಪ್ರತಿಬಿಂಬವೂ ಹೌದು. ಸಮಾಜದಲ್ಲಿ ಎಲ್ಲರೂ ಆಕೆಯನ್ನು ಪೂಜ್ಯನೀಯ ಭಾವನೆಯಿಂದ ನೋಡಬೇಕು ಎಂದು ಕರೆ ನೀಡಿದರು.
ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ಡಾ.ಕುಮುದಾ ಮಾತನಾಡಿ, ಮಹಿಳೆಯರು ಅಡುಗೆ ಮನೆಗೆ ಸೀಮಿತವಾಗಿಲ್ಲ. ಎಲ್ಲ ಕ್ಷೇತ್ರಗಳಲ್ಲೂ ಛಾಪು ಮೂಡಿಸುತ್ತಿದ್ದಾರೆ. ಪುರುಷರಿಗೆ ಸರಿಸಮಾನರಾಗಿ ಹೆಜ್ಜೆ ಹಾಕುತ್ತಿರುವ ಮಹಿಳೆಯರು, ಕುಟುಂಬ ನಿರ್ವಹಣೆಯಲ್ಲಿ ಅತ್ಯಂತ ಮಹತ್ವದ ಜವಾಬ್ದಾರಿ ಹೊರುತ್ತಿದ್ದಾರೆ. ಒನಕೆ ಓಬವ್ವ, ಕಿತ್ತೂರು ರಾಣಿ ಚನ್ನಮ್ಮ ಅವರಂತಹ ವೀರ ಮಹಿಳೆಯರ ಆದರ್ಶವನ್ನು ಮಹಿಳೆಯರು ಮೈಗೂಡಿಸಿಕೊಳ್ಳಬೇಕು. ಮಹಿಳೆಯರು ಶೈಕ್ಷಣಿಕ ಮತ್ತು ಆರ್ಥಿಕವಾಗಿ ಸ್ವಾವಲಂಬಿಗಳಾದಾಗ ಮಾತ್ರ ಸಮಗ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದರು.
ಚನ್ನರಾಯಪಟ್ಟಣ ರೋಟರಿ ಕ್ಲಬ್ ಅಧ್ಯಕ್ಷ ಬಿ.ವಿ.ವಿಜಯ್‌ಕುಮಾರ್ ಮಾತನಾಡಿ, ಹೆಣ್ಣು ಸಮಾಜದಲ್ಲಿ ಗುರುತಿಸಿಕೊಳ್ಳಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ. ಮಹಿಳೆಯರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಪಾರ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.
ಸ್ವಉದ್ಯೋಗ ಮಾಡುವ ಮೂರು ಜನ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರವನ್ನು ವಿತರಣೆ ಮಾಡಲಾಯಿತು. ವಿಶೇಷ ಸಾಧನೆ ಮಾಡಿದ ಮಹಿಳೆಯರಿಗೆ ಸನ್ಮಾನಿಸಿ ಗೌರವಿಸಲಾಯಿತು. ಚನ್ನಪಟ್ಟಣ ರೋಟರಿ ಕ್ಲಬ್ ಖಜಾಂಚಿ ನಟರಾಜ್, ಸದಸ್ಯರಾದ ರಾಜು, ಕಿಶೋರ್ ಕುಮಾರ್, ಭರತ್‌ಕುಮಾರ್ ಸೇರಿದಂತೆ ಇತರರು ಭಾಗವಹಿಸಿದ್ದರು.