

ಮೈಸೂರು: ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಗೀಳಾಗಿ ಪರಿಣಮಿಸುವ ಮಾದಕ ವಸ್ತುಗಳ ಸೇವನೆಯು ಭಾರತದಲ್ಲಿ ದಿನೇದಿನೆ ಹೆಚ್ಚಾಗುತ್ತಿದ್ದು, ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮಹಿಳೆಯರೇ ಹೆಚ್ಚು ಮಾದಕ ವಸ್ತುಗಳ ವ್ಯಸನಿಗಳಾಗುತ್ತಿರುವುದು ಶೋಚನೀಯ ಸಂಗತಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ಡಾ.ಪಿ.ಸಿ ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ ಮೈಸೂರು ಸಹಯೋಗದಲ್ಲಿ ಶನಿವಾರ ಎನ್.ಆರ್. ಮೊಹಲ್ಲಾದ ಸಿಪಿಸಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಣೆ ವಿರೋಧಿ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಾದಕ ವಸ್ತುಗಳ ಸೇವನೆ ಇಂದು ಸಾಮಾಜಿಕ ಪಿಡುಗಾಗಿ ಬೆಳೆಯುತ್ತಿದೆ. ಇದರಿಂದ ಚಟಕ್ಕೆ ದಾಸನಾಗಿರುವ ವ್ಯಕ್ತಿಗೆ ವೈಯಕ್ತಿಕ, ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಸರ್ವೇ ಗಮನಿಸುವುದಾದರೆ 16-17 ವರ್ಷದ ಹದಿಹರೆಯದ ಹುಡುಗ ಮತ್ತು ಹುಡುಗಿಯರು ಹೆಚ್ಚಾಗಿ ಮಾದಕ ವಸ್ತುಗಳ ಚಟಕ್ಕೆ ಒಳಗಾಗಿರುವುದು ಕಂಡುಬರುತ್ತದೆ. ಇದು ಆ ಮಕ್ಕಳ ಭವಿಷ್ಯಕ್ಕೆ ಮಾರಕ ಎಂದು ಎಚ್ಚರಿಸಿದರು.