ಮಹಿಳಾ ಕಾಲೇಜು ನೂತನ ಕಟ್ಟಡ ಉದ್ಘಾಟನೆ

mahila college
Published on

ಮಡಿಕೇರಿ: ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕಟ್ಟಡವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಸೋಮವಾರ ಉದ್ಘಾಟಿಸಿದರು.

ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್‌ಗೌಡ, ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಪಪ್ಪ, ನಗರಸಭೆ ಸದಸ್ಯರಾದ ಸತೀಶ್.ಎಸ್.ಸಿ, ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಡಾ.ಕೆ.ಆರ್.ಕವಿತಾ ಇತರರು ಇದ್ದರು.

ಶಾಸಕರಾದ ಡಾ.ಮಂತರ್ ಗೌಡ ಮಾತನಾಡಿ, ಸರ್ಕಾರ ಹೆಣ್ಣು ಮಕ್ಕಳಿಗೆ ಪ್ರತ್ಯೇಕವಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಿದ್ದು, ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿದೆ. ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾಲೇಜಿಗೆ ಸೇರುವಂತಾಗಬೇಕು. ಪ್ರಾಧ್ಯಾಪಕರು ಸಹ ಹೆಚ್ಚಿನ ಶ್ರಮವಹಿಸಿ ಪಾಠ ಪ್ರವಚನ ಮಾಡಬೇಕು ಎಂದು ಸಲಹೆ ಮಾಡಿದರು.

ಸರ್ಕಾರ ಈಗಾಗಲೇ ೨ ಕೋಟಿ ರೂ. ಬಿಡುಗಡೆ ಮಾಡಿ ಕಾಲೇಜು ಕಟ್ಟಡವನ್ನು ಪೂರ್ಣಗೊಳಿಸಲಾಗಿದೆ. ಇನ್ನೂ ೨.೫೦ ಕೋಟಿ ರೂ ಬಿಡುಗಡೆ ಮಾಡಲು ಉನ್ನತ ಶಿಕ್ಷಣ ಸಚಿವರಾದ ಸುಧಾಕರ ಅವರಲ್ಲಿ ಮನವಿ ಮಾಡಲಾಗಿದ್ದು, ಸದ್ಯದಲ್ಲಿಯೇ ಹಣ ಬಿಡುಗಡೆಯಾಗಲಿದೆ ಎಂದು ಹೇಳಿದರು.

ಉನ್ನತ ಶಿಕ್ಷಣ ಸಚಿವರು ಹಣ ಕೇಳಿದ ತಕ್ಷಣವೇ ಅನುದಾನ ಬಿಡುಗಡೆ ಮಾಡಿದರು. ಆ ನಿಟ್ಟಿನಲ್ಲಿ ಕಾಲೇಜಿನ ಮತ್ತಷ್ಟು ಅಭಿವೃದ್ಧಿಗೆ ಶ್ರಮಿಸಲಾಗುವುದು. ವಿದ್ಯಾರ್ಥಿನಿಯರು ಪದವಿ, ಸ್ನಾತಕೋತ್ತರ ಪದವಿ ಪಡೆದು ಒಳ್ಳೆಯ ಪ್ರಜೆಗಳಾಗಿ ಬದುಕಬೇಕು ಎಂದು ಡಾ.ಮಂತರ್ ಗೌಡ ತಿಳಿಸಿದರು.

ಕಾಲೇಜಿನಲ್ಲಿ ಈ ಬಾರಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಬಹುಮಾನ ಜೊತೆಗೆ ಸನ್ಮಾನಿಸಲಾಗುವುದು. ವಿದ್ಯಾರ್ಥಿನಿಯರು ಓದಿನ ಜೊತೆಗೆ, ಕ್ರೀಡೆ, ಸಾಹಿತ್ಯ, ಸಂಗೀತ ಕ್ಷೇತ್ರದಲ್ಲೂ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಎಚ್.ಪಿ.ನಿರ್ಮಲ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ನಿಕಟ ಪೂರ್ವ ಪ್ರಾಂಶುಪಾಲೆ ಕೋರನ ಸರಸ್ವತಿ, ಜೆನ್ನಿಫರ್ ಲೋಲಿಟ, ಚಿತ್ರ, ನೋಡಲ್ ಅಧಿಕಾರಿ ಕೆ.ಸಿ.ದಯಾನಂದ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ರೇವತಿ ರಮೇಶ್, ಹಬೀಬ್ ಅಹಮದ್, ಶರಣ್, ಪ್ರೇಮ ನಿಂಗಪ್ಪ, ರಿಯಾಜುದ್ದೀನ್, ಪ್ರೇಮ ಕೃಷ್ಣಪ್ಪ, ಕವನ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ್ ಪ್ರಸನ್ನ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ್, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ, ಯುವ ಒಕ್ಕೂಟದ ಪಿ.ಪಿ.ಸುಕುಮಾರ್, ಎಂಜಿನಿಯರ್ ಪ್ರಮೋದ್, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net