

ಹನೂರು: ತಾಲೂಕಿನ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್‌ಪಿಎಸ್ ಕ್ಯಾಂಪ್‌ನ ಸಿ ಮತ್ತು ಡಿ ವಿಲೇಜ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ ಸೋಮವಾರ ಮಹಿಳೆಯರು ಪ್ರತಿಭಟನೆ ನಡೆಸಿದರು.
ಗ್ರಾಮದಲ್ಲಿ ನೆರೆದಿದ್ದ ಸುಮಾರು 50ಕ್ಕೂ ಹೆಚ್ಚು ಮಹಿಳೆಯರು ಖಾಲಿ ಬಿಂದಿಗೆ ಹಿಡಿದು ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವಲ್ಲಿ ನಿರ್ಲಕ್ಷ್ಯ ವಹಿಸಿರುವ ಗ್ರಾಪಂ ಪಿಡಿಒ ರಂಗಸ್ವಾಮಿ ಅವರ ಕಾರ್ಯವೈಖರಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಹಿಳೆಯರು ಮಾತನಾಡಿ, ಗ್ರಾಮದಲ್ಲಿ 250 ಕುಟುಂಬಗಳಿದ್ದು, ಸುಮಾರು ಸಾವಿರಕ್ಕೂ ಹೆಚ್ಚಿನ ಜನಸಂಖ್ಯೆ ಇದೆ. ಕೃಷಿ ಜಮೀನುಗಳಲ್ಲಿ ಕೂಲಿಯನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದೇವೆ. ಆದರೆ ಆಗ್ಗಾಗ್ಗೆ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುತ್ತಲೇ ಇದೆ. ಕಳೆದ 2 ತಿಂಗಳ ಹಿಂದೆ ನೀರಿನ ಸಮಸ್ಯೆ ಎದುರಾದ ಸಂದರ್ಭದಲ್ಲಿ ಕುರಟ್ಟಿ ಹೊಸೂರು ಗ್ರಾಪಂ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗಿತ್ತು. ಮಾರನೇ ದಿನ ತಾಲೂಕು ಪಂಚಾಯಿತಿ ಇಒ ಅವರು ಗ್ರಾಮಕ್ಕೆ ಆಗಮಿಸಿ ಕೂಡಲೇ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಪಿಡಿಒ ಅವರಿಗೆ ಸೂಚಿಸಿದ್ದರು. ಬಳಿಕ ನೀರಿನ ಸೌಕರ್ಯ ಕಲ್ಪಿಸಲಾಗಿತ್ತು.
ಆದರೆ ಕಳೆದ 20 ದಿನಗಳಿಂದ ಮನೆ ನಲ್ಲಿಗಳಿಗೆ ನೀರು ಸರಬರಾಜಾಗುತ್ತಿಲ್ಲ. ಇದರಿಂದ ಬಿಂದಿಗೆ ನೀರಿಗೂ ತುಂಬಾ ತೊಂದರೆ ಅನುಭವಿಸುತ್ತಿದ್ದೇವೆ. ಈ ಬಗ್ಗೆ ಪಿಡಿಒ ರಂಗಸ್ವಾಮಿ ಅವರ ಗಮನಕ್ಕೆ ತಂದಿದ್ದರೂ ನೀರಿನ ಸಮಸ್ಯೆಯನ್ನು ಬಗೆಹರಿಸುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ. ಗ್ರಾಮಕ್ಕೆ ಭೇಟಿ ಸಹ ನೀಡುತ್ತಿಲ್ಲ. ಇದರಿಂದ ಕುಡಿಯುವ ನೀರಿನ ಸಮಸ್ಯೆ ತಾರಕಕ್ಕೇರಿದ್ದು, ಗ್ರಾಪಂ ಸದಸ್ಯ ಸರದಾರ್ ಅವರು ಸ್ವಂತ ಹಣದಿಂದ ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿದ್ದಾರೆ. 15 ಹಣಕಾಸು ಯೋಜನೆಯಡಿ ಅನುದಾನವನ್ನು ಬಳಸಿಕೊಂಡು ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬಹುದಾಗಿದೆ. ಆದರೆ ಪಿಡಿಒ ಅವರು ಗ್ರಾಮವನ್ನು ಕಡೆಗಣಿಸಿದ್ದಾರೆ. ಇದರಿಂದ ಹನಿ ನೀರಿಗೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೂಲಿಗೆ ತೆರಳಲು ಸಾಧ್ಯವಾಗುತ್ತಿಲ್ಲ. ಇದರಿಂದ ತುಂಬಾ ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತು ಗ್ರಾಮದಲ್ಲಿರುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲವಾದಲ್ಲಿ ಗ್ರಾಪಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂಬಂಧ ಪಿಡಿಒ ರಂಗಸ್ವಾಮಿ ಅವರು ವಿಜಯವಾಣಿಯೊಂದಿಗೆ ಮಾತನಾಡಿ, ಗ್ರಾಮದಲ್ಲಿ ಕೂಡಲೇ ಪೈಪ್‌ಲೈನ್ ಕಾಮಗಾರಿಯನ್ನು ಕೈಗೊಂಡು ನೀರಿನ ಸಮಸ್ಯೆಯನ್ನು ಬಗೆಹರಿಸುವುದಾಗಿ ತಿಳಿಸಿದರು.
ಪ್ರತಿಭಟನೆಯಲ್ಲಿ ಗ್ರಾಮದ ಸಿದ್ದಮ್ಮ, ವೀರಮ್ಮ, ವಸಂತಾ, ತೊಳಸಮ್ಮ, ಪಳನಿಯಮ್ಮ, ಚೈತ್ರಾ, ಕರೂರಮ್ಮ, ರಾಜಮ್ಮ ಹಾಗೂ ಇನ್ನಿತರರು ಇದ್ದರು.