

ಕಲಬುರಗಿ: ಕರ್ನಾಟಕ ವಕ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಅನುಮೋದನೆ ದೊರೆತಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ 47.76 ಕೋಟಿ ರೂ. ವೆಚ್ಚದಲ್ಲಿ 15 ಮಹಿಳಾ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಅನುಮೋದನೆ ದೊರೆತಿದೆ. ಪ್ರತಿ ಕಾಲೇಜಿಗೆ 3.18ಕೋಟಿ ರೂ. ವೆಚ್ಚವಾಗಲಿದೆ ಎಂದು ತಿಳಿಸಿದ್ದಾರೆ.
ಎಲ್ಲೆಲ್ಲಿ ಕಾಲೇಜು ನಿರ್ಮಾಣ?: ವಕ್ಫ್ ಬೋರ್ಡ್ ನಲ್ಲಿ ಜಮೆ ಆಗಿರುವ ಬಡ್ಡಿ ಮೊತ್ತ 47.76 ಕೋಟಿ ರೂ. ನಲ್ಲಿ ಬಾಗಲಕೋಟೆ, ಚಿತ್ರದುರ್ಗ, ಬೀದರ್, ಬಳ್ಳಾರಿ, ಕೊಪ್ಪಳ, ಮೈಸೂರು, ಬೆಂಗಳೂರು, ಚಿಕ್ಕಬಳ್ಳಾಪುರ, ವಿಜಯನಗರ, ಕಲಬುರಗಿ, ಉಡುಪಿ, ವಿಜಯಪುರ, ಕೋಲಾರ, ದಾವಣಗೆರೆ ಹಾಗೂ ಧಾರವಾಡದಲ್ಲಿ ಮಹಿಳಾ ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದರು.
ಮಹಿಳಾ ಕಾಲೇಜು ಸ್ಥಾಪನೆಯಿಂದ ಸಮುದಾಯಕ್ಕೆ ಉನ್ನತ ಶಿಕ್ಷಣ ಇದರ ಜತೆಗೆ, ಕರ್ನಾಟಕ ಗೃಹ ಮಂಡಳಿ ವತಿಯಿಂದ 50:50 ಅನುಪಾತದಲ್ಲಿ ಕಲಬುರಗಿಯ ತಾವರೆಗೆರೆ ಯಲ್ಲಿ 80 ಕೋಟಿ ರೂ. ವೆಚ್ಚದಲ್ಲಿ ಒಟ್ಟು 286.28 ಎಕರೆ ಪೈಕಿ ಮೊದಲ ಹಂತದಲ್ಲಿ 87.34 ಎಕರೆ ಜಮೀನಿನಲ್ಲಿ ಹೊಸ ಬಡಾವಣೆ ನಿರ್ಮಿಸಲು ಸಂಪುಟ ಅನುಮೋದನೆ ನೀಡಿದೆ ಎಂದು ಹೇಳಿದರು.
ವಕ್ಫ್ ಕಾಯಿದೆ ತಿದ್ದುಪಡಿಗೆ ತೀವ್ರ ವಿರೋಧ: ವಕ್ಫ್ ಕಾಯಿದೆಗೆ ತಿದ್ದುಪಡಿ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ರಾಜ್ಯ ವಕ್ಫ್ ಮಂಡಳಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಬಗ್ಗೆ ಸಭೆ ನಡೆಸಿ ತನ್ನ ನಿಲುವನ್ನು ರಾಜ್ಯ ಸರ್ಕಾರಕ್ಕೆ ತಿಳಿಸಿರುವ ವಕ್ಫ್ ಬೋರ್ಡ್ ಪದಾಧಿಕಾರಿಗಳು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಒತ್ತಡ ಹೇರಬೇಕು ಎಂದು ಮನವಿ ಮಾಡಿದೆ. ಅದೇ ರೀತಿ ಮುಸ್ಲಿಂ ಧರ್ಮಗುರುಗಳ ನಿಯೋಗವು ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಾಯಿದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದೆ.