

ಮೈಸೂರು: ರೈತ ಆತ್ಮಹತ್ಯೆ ಸಂಬಂಧ ಜಿಲ್ಲೆಯಲ್ಲಿ ಎಲ್ಲ 65 ಪ್ರಕರಣಗಳು ಇತ್ಯರ್ಥವಾಗಿದ್ದು, ಅಧಿಕಾರಿಗಳು ರೈತರ ಕುಟುಂಬದ ಶ್ರೇಯೋಭಿವೃದ್ಧಿಗಾಗಿ ಸೇವೆ ಒದಗಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರೈತರ ಆತ್ಮಹತ್ಯೆ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ಉಸ್ತುವಾರಿ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರೈತ ಆತ್ಮಹತ್ಯೆ ಪ್ರಕರಣ ಕಂಡುಬಂದ 24 ಗಂಟೆಯೊಳಗೆ ಆಯಾ ತಾಲೂಕಿನ ತಹಸೀಲ್ದಾರ್ ಹಾಗೂ ಸಮಿತಿಯವರು ಸ್ಧಳಕ್ಕೆ ಭೇಟಿ ಮಾಡಿ ವರದಿ ನೀಡಬೇಕು. ರೈತ ಕುಟುಂಬಕ್ಕೆ ಸಿಗಬೇಕಾದ ಸರ್ಕಾರದ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು. ಇಲ್ಲದಿದ್ದರೆ ಸಂಬಂಧ ಪಟ್ಟ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಆತ್ಮಹತ್ಯೆಗೆ ಶರಣಾದ ರೈತರ ಕುಟುಂಬಕ್ಕೆ ವಿಶೇಷ ಸೌಲಭ್ಯಗಳನ್ನು ನೀಡಬೇಕು ಹಾಗೂ ಆತ್ಮಹತ್ಯೆಗೆ ಶರಣಾದ ಅರ್ಹ ರೈತ ಕುಟುಂಬಕ್ಕೆ ನೀಡಲಾಗುತ್ತಿರುವ ವಿಶೇಷ ಸೌಲಭ್ಯಗಳಾದ ಮೃತ ರೈತನ ಪತ್ನಿಗೆ 2000 ರೂ. ಮಾಸಾಶನ, ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ಉಚಿತ ಶಿಕ್ಷಣ ಸೌಲಭ್ಯ, ಆತ್ಮಹತ್ಯೆ ಮಾಡಿಕೊಂಡು ಮೃತರಾದ ರೈತರ ಕುಟುಂಬಗಳಿಗೆ ವಿಶೇಷ ಆರೋಗ್ಯ ಸೌಲಭ್ಯಗಳು ದೊರೆಯುವಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು.
ಹೆಚ್ಚುವರಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ನಂದಿನಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕುಮಾರಸ್ವಾಮಿ, ಜಿಲ್ಲಾ ಸಹಕಾರ ನಿಬಂಧಕರು, ಜಿಲ್ಲಾ ಶಿಕ್ಷಣಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.