

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಅವರನ್ನು ಗೆಲ್ಲಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಕರೆ ನೀಡಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಮರಿತಿಬ್ಬೇಗೌಡರು ಶಿಕ್ಷಕರ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುವ ವ್ಯಕ್ತಿಯಾಗಿದ್ದಾರೆ. ಶಿಕ್ಷಕರ ಪರವಾದ ಯೋಜನೆಗಳು, ಕಾಯ್ದೆಗಳು ರೂಪಿಸುವ ಸಂದರ್ಭ ಮರಿತಿಬ್ಬೇಗೌಡರು ಸಾಕಷ್ಟು ಅಮೂಲ್ಯ ಸಲಹೆಗಳನ್ನು ನೀಡಿದ್ದಾರೆ. ಇಂತಹ ವ್ಯಕ್ತಿಯನ್ನು ಈ ಬಾರಿಯ ಚುನಾವಣೆಯಲ್ಲಿ ಶಿಕ್ಷಕರು ಗೆಲ್ಲಿಸಬೇಕು ಎಂದು ಕರೆ ನೀಡಿದರು.
ಈ ಚುನಾವಣೆಯಲ್ಲಿ ಗೆಲುವು ಸಾಧಿಸಲು ಎಲ್ಲರು ಒಗ್ಗಟ್ಟಿನಿಂದ ಶ್ರಮಿಸಬೇಕು. ಪಕ್ಷದ ವಿವಿಧ ಸಮಿತಿಗಳಿಗೆ ಚುನಾವಣೆಯ ಜವಾಬ್ದಾರಿ ವಹಿಸಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದ್ದು, ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮರಿತಿಬ್ಬೇಗೌಡರು ಗೆಲುವು ಸಾಧಿಸುವುದು ನಿಶ್ಚಿತ ಎಂದು ಭವಿಷ್ಯ ನುಡಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ಮಾತನಾಡಿ, ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯು ನಾಲ್ಕು ಜಿಲ್ಲೆಗಳಲ್ಲಿ ನಡೆಯುವ ಚುನಾ ವಣೆಯಾಗಿದ್ದು, ಪ್ರತಿ ಜಿಲ್ಲೆಯಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಉತ್ಸಾಹದಿಂದ ಚುನಾವಣೆ ಎದುರಿಸುವ ಮೂಲಕ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಶಿಕ್ಷಕ ಮತ್ತು ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಐದು ಬಾರಿ ಚುನಾವಣೆ ಎದುರಿಸಿ ಅನುಭವ ಹೊಂದಿದ್ದಾರೆ. ಈ ಕ್ಷೇತ್ರದಲ್ಲಿ ಪ್ರಜ್ಞಾವಂತ ಮತದಾರರು ಇದ್ದು, ಅವರ ಸಮಸ್ಯೆಗಳನ್ನು ಪರಿಹರಿಸುವ ಕೆಲಸವನ್ನು ಮುಖಂಡರು ಮಾಡಬೇಕು ಎಂದರು.
ಕೆಪಿಸಿಸಿ ಕಾರ್ಯದರ್ಶಿ ಎಂ. ಲಕ್ಷ್ಮಣ್ ಮಾತನಾಡಿ, ದಕ್ಷಿಣ ಶಿಕ್ಷಕರ ಕ್ಷೇತ್ರ ಸೇರಿದಂತೆ ರಾಜ್ಯದ 6 ವಿಧಾನ ಪರಿಷತ್ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲು ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.
ಕಾಂಗ್ರೆಸ್ ಪಕ್ಷ ವಿಧಾನ ಪರಿಷತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲ ಕ್ಷೇತ್ರಗಳಲ್ಲೂ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದರೆ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ಗೆ ಬಲ ದೊರೆಯುತ್ತದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮರಿತಿಬ್ಬೇಗೌಡರ ವಿರುದ್ಧ ಕಳೆದ ಬಾರಿ ನಾನು ಸ್ಪರ್ಧಿಸಿ ಕಡಿಮೆ ಮತಗಳ ಅಂತರದಿಂದ ಸೋಲು ಅನುಭವಿಸಿದ್ದೆ. ಈ ಬಾರಿ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದು ಸಂತಸದ ವಿಚಾರ. ಅವರಿಗೆ ನಮ್ಮ ಸಂಪೂರ್ಣ ಬೆಂಬಲ ನೀಡಲಾಗುವುದು. ಕ್ಷೇತ್ರ ವ್ಯಾಪ್ತಿಯಲ್ಲಿ ಎಲ್ಲ ಕಾಂಗ್ರೆಸ್ ಶಾಸಕರು ಜವಾಬ್ದಾರಿ ತೆಗೆದುಕೊಂಡು ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು. ನಮ್ಮ ಪಕ್ಷದ ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ಯದ ದೊರೆಯುವಂತೆ ಮಾಡಬೇಕು ಎಂದರು.
ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಮಾತನಾಡಿ, ಈ ಕ್ಷೇತ್ರದಲ್ಲಿ ಮೊದಲ ಬಾರಿಗೆ ನಾನು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದೆ. ನನಗೆ ಮೊದಲಿನಿಂದಲೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರೊಂದಿಗೆ ಉತ್ತಮ ಒಡನಾಟವಿದೆ. ಜೆಡಿಎಸ್ ಪಕ್ಷದಲ್ಲಿ ಸಾಕಷ್ಟು ಕೆಲಸ ವಾಡಿದರೂ ವಿಧಾನಸಭೆ ಪ್ರವೇಶಕ್ಕೆ ಅವಕಾಶ ನೀಡಲಿಲ್ಲ. ಹೀಗಾಗಿ ಜೆಡಿಎಸ್ ತೊರೆಯುವ ಪರಿಸ್ಥಿತಿ ನಿರ್ಮಾಣವಾಯಿತು ಎಂದರು.
ನಾನು ಕಳೆದ 24 ವರ್ಷಗಳಿಂದ ವಿಧಾನ ಪರಿಷತ್ ಸದಸ್ಯನಾಗಿ ಶಿಕ್ಷಕರು ಹಾಗೂ ಪದವೀಧರರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ. ನಾನು ಪಕ್ಷ ಬದಲಾಯಿಸಿದ್ದೇನೆ ಹೊರತು ನನ್ನ ಉದ್ದೇಶ, ಚಿಂತನೆಗಳು ಎಂದಿಗೂ ಬದಲಾಗಿಲ್ಲ. ಹಾಗಾಗಿ ಶಿಕ್ಷಕರು ಈ ಬಾರಿಯ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಶಾಸಕ ಕೆ.ಹರೀಶ್ ಗೌಡ, ಎ.ಆರ್. ಕೃಷ್ಣಮೂರ್ತಿ, ಮಾಜಿ ಶಾಸಕರಾದ ಎಂ.ಕೆ. ಸೋಮಶೇಖರ್, ಕಳಲೆ ಕೇಶವಮೂರ್ತಿ, ಡಾ.ಯತೀಂದ್ರ ಸಿದ್ದರಾಮಯ್ಯ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರ್‌ನಾಥ್, ಮಾಜಿ ಸಚಿವ ಎಂ ಶಿವಣ್ಣ, ಮಾಜಿ ಮೇಯರ್‌ಗಳಾದ ನಾರಾಯಣ್, ಪುರುಷೋತ್ತಮ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್, ನಗರಾಧ್ಯಕ್ಷ ಆರ್. ಮೂರ್ತಿ ಇದ್ದರು.