ನಿರ್ಭೀತಿಯಿಂದ ಕೆಲಸ ಮಾಡಲು ಅವಕಾಶ ಕಲ್ಪಿಸಿ

28LNG02
Published on

ಲಿಂಗಸುಗೂರು: ರಾಯಚೂರಿನಲ್ಲಿ ಖಾಸಗಿ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಎಸಿ ಅವಿನಾಶ ಶಿಂಧೆಗೆ ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರು ಹಾಗೂ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಶುಕ್ರವಾರ ಮನವಿ ಸಲ್ಲಿಸಿದರು.

ರೋಗಿಯ ಸಂಬಂಧಿಕರು ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿರುವುದು ಖಂಡನೀಯ. ಆಸ್ಪತ್ರೆ ಸಿಬ್ಬಂದಿ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಭೀರ ರೋಗಿಗಳ ಜೀವಕ್ಕೆ ಅಪಾಯ ತರುವಂತೆ ಗದ್ದಲ ಮತ್ತು ಭಯದ ವಾತಾವರಣ ಸೃಷ್ಟಿಸಲಾಗಿದೆ. ಈ ಘಟನೆಯಿಂದ ಆರೋಗ್ಯ ವೃತ್ತಿಪರರು ನಿರ್ಭಯವಾಗಿ ಮತ್ತು ರೋಗಿಗಳ ಹಿತದೃಷ್ಟಿಯಿಂದ ಕೆಲಸ ಮಾಡುವ ನೈತಿಕತೆ ಮತ್ತು ಆತ್ಮವಿಶ್ವಾಸ ತಗ್ಗಿಸಿದೆ ಎಂದರು.

ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಘಟನೆಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ತುರ್ತು ಚಿಕಿತ್ಸೆ ಹೊರತುಪಡಿಸಿ ಇತರ ಸೇವೆ ಸ್ಥಗಿತಗೊಳಿಸಲಾಗಿದೆ. ಹಿಂಸಾಚಾರವೆಸಗಿದವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಆರೋಗ್ಯ ವೃತ್ತಿಪರರು ಘನತೆ ಮತ್ತು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಅನುಕೂಲ ಕಲ್ಪಿಸಬೇಕೆಂದು ಒತ್ತಾಯಿಸಲಾಯಿತು.

ವೈದ್ಯರಾದ ಎಂ.ಡಿ.ಖಾಜಾಮೊಹಿನುದ್ದೀನ್, ಗುರುರಾಜ ದೇಶಪಾಂಡೆ, ನಾಗನಗೌಡ ಪಾಟೀಲ್, ವನಮಾಲಾ, ಅಮರೇಗೌಡ ಪೊಲೀಸ್ ಪಾಟೀಲ್, ಬ್ರಹ್ಮಾನಂದ, ಡಿ.ಎಚ್.ಕಡದಳ್ಳಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net