

ಮಡಿಕೇರಿ: ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳನ್ನು ಮತದಾರರಿಗೆ ತಿಳಿಸಿ, ಪಕ್ಷದ ಗೆಲುವಿಗೆ ಶ್ರಮಿಸುವಂತೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹೇಳಿದರು.
ಲೋಕಸಭಾ ಚುನಾವಣಾ ಹಿನ್ನೆಲೆ ನಗರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬೃಹತ್ ಬೈಕ್ ಹಾಗೂ ಆಟೋ ಜಾಥಾದ ಮೂಲಕ ಬಿರುಸಿನ ಮತಪ್ರಚಾರದಲ್ಲಿ ಮಾತನಾಡಿದರು.
ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಗ್ಯಾರಂಟಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿದೆ. ಇದನ್ನು ಮತದಾರರಿಗೆ ತಿಳಿಸಿ ಮತ ಹಾಕಿಸುವಂತಾಗಬೇಕು. ಕಾರ್ಯಕರ್ತರು ಪಕ್ಷದ ಶಕ್ತಿ. ಭಿನ್ನಭಿಪ್ರಾಗಳನ್ನು ಬದಿಗೊತ್ತಿ ಎಲ್ಲರೂ ಒಂದಾಗಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಅವರನ್ನು ಗೆಲ್ಲಿಸಬೇಕು ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಚುನಾವಣೆಯಲ್ಲಿ ಉತ್ಸಾಹದಿಂದ ಕಾರ್ಯಕರ್ತರು ಕೆಲಸ ಮಾಡಬೇಕು. ದೇಶ, ರಾಜ್ಯಕ್ಕೆ ನೀಡಿರುವ ಕಾಂಗ್ರೆಸ್ ಕೊಡುಗೆಯನ್ನು ಮನೆ ಮನೆಗೆ ತಲುಪಿಸಬೇಕು. ಮೂಲಭೂತ ಸೌಲಭ್ಯ, ಆಹಾರ ಕೊರತೆಯಿಂದ ಹಿಂದುಳಿದ್ದ ಭಾರತವನ್ನು ಅಭಿವೃದ್ಧಿ ಕಡೆಗೆ ಕೊಂಡೊಯ್ದಿದ್ದು, ಕಾಂಗ್ರೆಸ್ ಸರ್ಕಾರ ಎಂದರು.
ವಿಧಾನ ಪರಿಷತ್ತು ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ, ಕಾಂಗ್ರೆಸ್ ನಗರಾಧ್ಯಕ್ಷ ಬಿ.ವೈ.ರಾಜೇಶ್, ಮಾಧ್ಯಮ ಸಂವಹನ ವಿಭಾಗದ ವಕ್ತಾರ ಟಿ.ಪಿ.ರಮೇಶ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ ಕೊಟ್ಟಮುಡಿ, ನಗರಾಧ್ಯಕ್ಷ ರಾಜೇಶ್ ಯಲ್ಲಪ್ಪ, ಜಿಲ್ಲಾ ಉಪಾಧ್ಯಕ್ಷ ಸುಜು ತಿಮ್ಮಯ್ಯ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಪ್ರಮುಖರಾದ ಪ್ರಕಾಶ್ ಆಚಾರ್ಯ, ತೆನ್ನಿರಾ ಮೈನಾ, ಪ್ರಭು ರೈ, ಜಿ.ಸಿ.ಜಗದೀಶ್, ಸದಾ ಮುದ್ದಪ್ಪ, ಕೆ.ಎಂ.ವೆಂಕಟೇಶ್ ಹಾಗೂ ಇತರರು ಹಾಜರಿದ್ದರು.