ಶೋಷಣೆ ವಿರುದ್ಧ ಧ್ವನಿ ಎತ್ತಿಬೇಕು

dc workshop
Published on

 ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ

ಮಹಿಳೆಯರು ಮತ್ತು ಮಕ್ಕಳು ಅಕ್ರಮ ಸಾಗಾಣಿಕೆಗೆ ಒಳಗಾಗದಂತೆ ಅವರನ್ನು ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಇಂಥ ಶೋಷಣೆಗಳ ವಿರುದ್ಧ ಎಲ್ಲರೂ ಧ್ವನಿ ಎತ್ತಬೇಕು ಎಂದು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಕರೆ ನೀಡಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಸಹಯೋಗದಲ್ಲಿ ದೇವನಹಳ್ಳಿ ತಾಲೂಕು ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಹಿಳೆಯರ ಮತ್ತು ಮಕ್ಕಳ ಅಕ್ರಮ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ಗುರುವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಗಾರದಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಇಂಥಹ ಪ್ರಕರಣಗಳು ನಡೆಯದಂತೆ ಎಲ್ಲ ಇಲಾಖೆಗಳು ಪರಸ್ಪರ ಸಹಯೋಗದಿಂದ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಜತೆಗೆ ಜಿಲ್ಲೆಯಲ್ಲಿ ಈ ಕುರಿತು ಸಾಕಷ್ಟು ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಬಾಲಕಾರ್ಮಿಕ ಪದ್ಧತಿಗೆ ಕಠಿಣ ಕ್ರಮ: ಮಕ್ಕಳನ್ನು ಬಾಲ ಕಾರ್ಮಿಕ ಪದ್ಧತಿಗೆ ದೂಡುವುದೂ ಅಪರಾಧ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು. ಮಕ್ಕಳ ಕಳ್ಳಸಾಗಣೆ, ಲೈಂಗಿಕ ದೌರ್ಜನ್ಯ, ಗುಲಾಮಗಿರಿ, ಜೀತ ಪದ್ಧತಿಯನ್ನು ನಿರ್ಮೂಲನ ಮಾಡಬೇಕು, ಇಂಥ ಪರಿಸ್ಥಿತಿ ನಿರ್ಮಾಣವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು. ಭಿಕ್ಷೆ ಕೇಳುವ ಮಕ್ಕಳನ್ನು ಕಂಡಾಗ 122 ಅಥವಾ ಮಕ್ಕಳ ಸಹಾಯವಾಣಿ 1098 ಸಂಖ್ಯೆಗೆ ಕರೆ ಮಾಡಿ ದೂರು ನೀಡಿ ಮಕ್ಕಳ ರಕ್ಷಣೆಗೆ ಸಹಕಾರ ನೀಡಬೇಕು ಇಂಥ ವಿಷಯದಲ್ಲಿ ಸಾರ್ವಜನಿಕರು ಧ್ವನಿ ಎತ್ತಬೇಕು ಜತೆಗೆ ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕು ಎಂದರು.

ಬಾಲ್ಯವಿವಾಹ ಪ್ರಕರಣ ಹೆಚ್ಚುತ್ತಿವೆ: ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್.ಅನುರಾಧಾ ಮಾತನಾಡಿ ಹೆಣ್ಣುಮಕ್ಕಳ ಬಾಲ್ಯವಿವಾಹ ಪ್ರಕರಣಗಳು ಹೆಚ್ಚುತ್ತಲೇ ಇದೆ. ಪಾಲಕರಿಗೆ ತಾವು ಮಾಡುತ್ತಿರುವ ತಪ್ಪಿನ ಅರಿವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಬಾಲ್ಯಾವಸ್ಥೆಯಲ್ಲಿರುವ ಹುಡುಗಿಗೆ ಯಾವುದೇ ತೀರ್ಮಾನ ತೆಗೆದುಕೊಳ್ಳುವ ಅರಿವು ಇರುವುದಿಲ್ಲ. ಬಾಲ್ಯವಿವಾಹ ಮಾಡುವವರಿಗೆ ಹಾಗೂ ಪ್ರೇರೇಪಣೆ ನೀಡುವವರಿಗೆ ಶಿಕ್ಷೆ ಆಗಬೇಕು ಎಂದು ಹೇಳಿದರು. ಜತೆಗೆ ಹದಿಹರೆಯದ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿವೆ ಕೆಲವು ಪ್ರಕರಣಗಳು ಹುಡುಗಿ ಗರ್ಭಿಣಿಯಾದ ಬಳಿಕ ಗೊತ್ತಾಗುತ್ತದೆ ಅಂತವರಿಗೆ ಶಿಕ್ಷೆಯಾಗಬೇಕು ಎಂದರು. ಶೋಷಣೆಗೆ ಒಳಗಾದವರಿಗೆ ರಕ್ಷಣಾತ್ಮಕ ಕ್ರಮ ಕೈಗೊಳ್ಳಲಾಗುವುದು ಮತ್ತು ಅವರಿಗೆ ಪುನರ್ವಸತಿ ಕಲ್ಪಿಸುವುದು, ಹಾಗೂ ಇದರಲ್ಲಿ ಭಾಗಿಯದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಐಟಿಪಿಎ 1956ರ ಕಾಯ್ದೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಬೆಂಗಳೂರಿನ ಗ್ಲೋಬಲ್ ಇಂಡಿಯಾ ನಿರ್ದೇಶಕ ಬೃಂದಾ ಹಾಗೂ ಬಚ್ಪನ್ ಬಚಾವೋ ಆಂದೋಲನದ ರಾಜ್ಯ ಸಂಯೋಜಕ ಬಿನು ವರ್ಗೀಸ್ ಅವರು ಮಹಿಳೆಯರ ಮತ್ತು ಮಕ್ಕಳ ಅಕ್ರಮ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ಹಾಗೂ ಐಟಿಪಿಎ 1956ರ ಕಾಯ್ದೆಯ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಹೆಣ್ಣುಮಕ್ಕಳು ಹಾಗೂ ಮಕ್ಕಳ ಕಳ್ಳಸಾಗಣೆ, ಇವರ ವಿರುದ್ಧ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಬೇಕಿದೆ, ಸಾರ್ವಜನಿಕರು ಇಂಥ ವಿಷಯಗಳ ಬಗ್ಗೆ ಹೆಚ್ಚೆಚ್ಚು ಜಾಗೃತರಾಗಬೇಕು, ಬಾಲ್ಯವಿವಾಹದಂಥ ಅನಿಷ್ಠ ಪದ್ಧತಿಗೆ ಯಾರೂ ಮುಂದಾಗಬಾರದು ಎಂಬ ಬಗ್ಗೆ ತಿಳಿಸಿಕೊಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net