ತುಳು ಭಾಷೆ ಉಳಿಸಿ ಬೆಳೆಸಲು ಅಭಿಯಾನ : ತಾರಾನಾಥ ಗಟ್ಟಿ ಕಾಪಿಕಾಡ್ ಮಾಹಿತಿ

07
Published on

ವಿಜಯವಾಣಿ ಸುದ್ದಿಜಾಲ ಉಳ್ಳಾಲ

ತುಳು ಭಾಷೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಮಕ್ಕಳಿಗೆ ತುಳುಭಾಷಾ ಹಾಡುಗಳನ್ನು ಕಲಿಸಲು ಅಕಾಡೆಮಿಯಿಂದ ಅಭಿಯಾನ ಆರಂಭಿಸಲಾಗಿದೆ ಎಂದು ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಸೋಮೇಶ್ವರದ ಆನಂದಾಶ್ರಮ ಪ್ರೌಢಶಾಲೆ ಸಹಯೋಗದಲ್ಲಿ ಶುಕ್ರವಾರ ಆನಂದಾಶ್ರಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ತುಳು ಹಾಡುಗಳ ಕಲಿಕಾ ಕಾರ್ಯಾಗಾರ ಮತ್ತು ಹಾಡುಗಳ ಪ್ರಸ್ತುತಿಯ ಡೆನ್ನ ಡೆನ್ನಾನ-ಪದ ಪನ್ಕನ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ತುಳು ಹಾಡುಗಳನ್ನು ಸುಶ್ರಾವ್ಯವಾಗಿ ಹಾಡಲು ಕಲಿಸುವ ಡೆನ್ನ ಡೆನ್ನಾನ-ಪದ ಪನ್ಕನ ಕಾರ್ಯಗಾರ ತುಳುವಿನ ಶ್ರೇಷ್ಠ ಕವಿ, ಹಾಡುಗಳ ಪರಿಚಯ ಮಾಡಿಕೊಡಲು ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ತುಳು ಹಾಡುಗಳನ್ನು ಇತರ ವೇದಿಕೆಗಳಲ್ಲಿ ಪ್ರಸ್ತುತಪಡಿಸಲು ಸಹಕಾರಿ ಎಂದರು.

ಕಲಾವಿದೆ ರೂಪಾಶ್ರೀ ವರ್ಕಾಡಿ ಉದ್ಘಾಟಿಸಿದರು. ಸಂಗೀತ ನಿರ್ದೇಶಕ ತೋನ್ಸೆ ಪುಷ್ಕಳ ಕುಮಾರ್, ಗಾಯಕಿ ವಾಣಿ ಸಪ್ರೆ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಸೋಮೇಶ್ವರ ಪುರಸಭೆ ಉಪಾಧ್ಯಕ್ಷ ರವಿಶಂಕರ್ ಸೋಮೇಶ್ವರ, ಆನಂದಾಶ್ರಮ ಪ್ರೌಢಶಾಲೆ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜೀವನ್ ಸೋಮೇಶ್ವರ, ಕೊಲ್ಯ ಶಾರದಾ ಸೇವಾ ಟ್ರಸ್ಟ್ ಅಧ್ಯಕ್ಷ ಮೋಹನ್ ಶೆಟ್ಟಿ, ಯಕ್ಷಗಾನ ಕಲಾವಿದ ಕುಸುಮಾಕರ ಕುಂಪಲ, ಮುಖ್ಯ ಶಿಕ್ಷಕ ಗುರುಮೂರ್ತಿ ಪಿ. ಉಪಸ್ಥಿತರಿದ್ದರು. ಶಿಕ್ಷಕರಾದ ಪ್ರದೀಪ್ ಕುಮಾರ್ ಸ್ವಾಗತಿಸಿದರು. ಶ್ರೀನಿವಾಸ್ ಶೆಣೈ ವಂದಿಸಿದರು. ಗಣೇಶ್ ಕೆ. ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net