

ಮೈಸೂರು: ಸರ್ಕಾರದ ಸೌಲಭ್ಯಗಳ ಮಾಹಿತಿಯನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಮಾಧ್ಯಮಗಳ ಪಾತ್ರ ಬಹಳ ಮುಖ್ಯ ಎಂದು ಮೈಸೂರು ವಿಶ್ವವಿದ್ಯಾಲಯ ಉಪ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಹೇಳಿದರು.
ನಗರದ ಖಾಸಗಿ ಹೋಟೆಲ್‌ವೊಂದರಲ್ಲಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಪತ್ರಕರ್ತರ ಸಂಘ, ಮೈಸೂರು ವಿಶ್ವ ವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ವತಿಯಿಂದ ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳಿಗೆ ಹಮ್ಮಿಕೊಂಡಿದ್ದ ವಾರ್ತಾಲಾಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸರ್ಕಾರದ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗೆ ತಲುಪಲು ಮಾಧ್ಯಮಗಳ ಪಾತ್ರ ಬಹಳ ಮುಖ್ಯ. ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರದ ಸೌಲಭ್ಯಗಳ ಮಾಹಿತಿ ದೊರೆಯಬೇಕು. ಇಂತಹ ಮಾಹಿತಿ ನೀಡುವ ಕಾರ್ಯಕ್ರಮಗಳು ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ನಡೆಯಬೇಕು. ಪತ್ರಿಕೆಗಳು ಮಾಹಿತಿಗಳನ್ನು ನೀಡುವ ಕೊಂಡಿಯಾಗಿವೆ ಎಂದರು.
ಕೇಂದ್ರ ವಾರ್ತಾ ಶಾಖೆಯ ಹೆಚ್ಚುವರಿ ಮಹಾ ನಿರ್ದೇಶಕ ಎಸ್.ಜಿ. ರವೀಂದ್ರ ಮಾತನಾಡಿ, ಕೇಂದ್ರ ಸರ್ಕಾರವು ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಕೇಂದ್ರ ಸರ್ಕಾರದಲ್ಲಿ 79 ಯೋಜನೆಗಳು ಇದ್ದು, ಇವುಗಳನ್ನು ಪ್ರಚಾರ ಮಾಡಲು ರಾಜ್ಯದಲ್ಲಿ 49 ವಾಹನಗಳು ಸಂಚಾರ ಮಾಡುತ್ತಿವೆ. ಬುಡಕಟ್ಟು ಜನಾಂಗಗಳ ಏಳಿಗೆಗೆ ಏಕಲವ್ಯ ಶಾಲೆಗಳನ್ನು ತೆರೆದು ಶಿಕ್ಷಣ ನೀಡಲಾಗುತ್ತಿದೆ. ವಿಕಸಿತ ಭಾರತ ಸಂಕಲ್ಪ ಯಾತ್ರೆಯನ್ನು ದೇಶದಾದ್ಯಂತ ನಡೆಯುತ್ತಿದೆ. ಡಿ.9 ರಂದು ಪ್ರಧಾನಿ ನರೇಂದ್ರ ಮೋದಿ ಕೋಲಾರ ಮತ್ತು ತುಮಕೂರು ಜಿಲ್ಲೆಯ ಜನರೊಂದಿಗೆ ವರ್ಚುಯಲ್ ಸಭೆಯ ಮೂಲಕ ಸಂವಾದ ನಡೆಸುತ್ತಾರೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಡಾ.ಪಿ.ಸಿ. ಕುಮಾರಸ್ವಾಮಿ ಮಾತನಾಡಿ, ಕಳೆದ ಎರಡು ವರ್ಷಗಳ ಹಿಂದೆ ಬಂದಂತಹ ಕೋವಿಡ್‌ಅನ್ನು ಆರೋಗ್ಯ ಇಲಾಖೆ ಯಶಸ್ವಿಯಾಗಿ ಎದುರಿಸಿತು. ಪಲ್ಸ್ಪೋಲಿಯೋ ಲಸಿಕೆಯನ್ನು ಯಶಸ್ವಿಯಾಗಿ ನೀಡಿ 2014ರಲ್ಲಿ ಭಾರತವನ್ನು ಪೋಲಿಯೋ ಮುಕ್ತ ರಾಷ್ಟ್ರ ಎಂದು ಘೋಷಿಸಲಾಗಿದೆ. 2025ಕ್ಕೆ ಕುಷ್ಟ ರೋಗ ಮುಕ್ತ ಮಾಡಲು ಹಲವು ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 20 ರಾಷ್ಟ್ರೀಯ ಯೋಜನೆಗಳನ್ನು ಆರೋಗ್ಯ ಇಲಾಖೆಯಿಂದ ಕಾರ್ಯ ರೂಪಕ್ಕೆ ತರಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ 1800 ಕ್ಕೂ ಹೆಚ್ಚು ಆರೋಗ್ಯ ಕಾರ್ಯಕರ್ತೆಯರ ಮೂಲಕ ಆರೋಗ್ಯ ಇಲಾಖೆಗೆ ಸಂಬಂಧಿಸಿದ ಮಾಹಿತಿ ಹಾಗೂ ಸೇವೆಯನ್ನು ಮನೆ ಮನೆಗೆ ತೆರಳಿ ನೀಡುತ್ತಿದ್ದಾರೆ. ಅಯುಷ್ಮನ್ ಭಾರತ್ ಆರೋಗ್ಯ ಕರ್ನಾಟಕ ಆರೋಗ್ಯ ಕಾರ್ಡ್‌ಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಡಾ.ಸಪ್ನ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಇವು ಜನರಿಗೆ ತಲುಪಬೇಕು. ಸೌಲಭ್ಯಗಳನ್ನು ಪಡೆದ ಜನರ ಅಭಿಪ್ರಾಯಗಳನ್ನು ಮಾಧ್ಯಮಗಳು ಪ್ರಚಾರ ಮಾಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ. ರವಿಕುಮಾರ್, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನ ಕುಮಾರ್, ಲೀಡ್‌ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ವಿ.ಎನ್. ನಾಗೇಶ್, ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ಉಪ ನಿರ್ದೇಶಕಿ ಶ್ರುತಿ ಹಾಗೂ ಇತರರು ಇದ್ದರು.