ಅಭಿವೃದ್ಧಿಯ ಹೆಸರಿನಲ್ಲಿ ಮರಗಳ ಹನನ: ಪಿಇಟಿ ನಿರ್ದೇಶಕ ಡಾ.ರಾಮಲಿಂಗಯ್ಯ ಬೇಸರ

World Environment Day Mandya
Published on

ಮಂಡ್ಯ: ಅಭಿವೃದ್ಧಿಯ ಹೆಸರಲ್ಲಿ ಮರಗಳನ್ನು ಕಟಾವು ಮಾಡುತ್ತಿರುವುದರಿಂದ ಇತ್ತೀಚಿನ ವರ್ಷಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುತ್ತಿದೆ ಎಂದು ಪಿಇಟಿ ನಿರ್ದೇಶಕ ಡಾ.ರಾಮಲಿಂಗಯ್ಯ ಬೇಸರ ವ್ಯಕ್ತಪಡಿಸಿದರು.

ನಗರದ ಕಾವೇರಿ ಉದ್ಯಾನದಲ್ಲಿ ಜಿಲ್ಲಾಡಳಿತ, ಮಾಲಿನ್ಯ ನಿಯಂತ್ರಣ ಮಂಡಳಿ, ಪರಿಸರ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ವತಿಯಿಂದ ನಮ್ಮ ಭೂಮಿ ನಮ್ಮ ಭವಿಷ್ಯ ಎಂಬ ಘೋಷವಾಕ್ಯದಡಿ ವಿಶ್ವ ಪರಿಸರ ದಿನದ ಅಂಗವಾಗಿ ಮಾಧ್ಯಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

200 ಕೋಟಿ ವರ್ಷದ ಇತಿಹಾಸ ಇರುವ ಭೂಮಿಯನ್ನು ಭವಿಷ್ಯದ ದೃಷ್ಟಿಯಿಂದ ಉಳಿಸುವ ಕೆಲಸವನ್ನು ಮಾಡುವ ಅವಶ್ಯಕತೆ ಇದೆ. ಅದರಂತೆ ವಿದ್ಯಾರ್ಥಿಗಳಿಗೆ ಭೂಮಿಯ ಬಗ್ಗೆ ತಿಳಿಸಿಕೊಡುವ ಕೆಲಸ ಮಾಡುವ ಅಗತ್ಯತೆ ಇದೆ. ಆದ್ದರಿಂದ ಪ್ರತಿಯೊಬ್ಬರು ತಮ್ಮ ಮನೆಯಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವುದರಿಂದ ಪರಿಸರ ಸಂರಕ್ಷಣೆ ಮಾಡಿದಂತಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಪರಿಸರ ಅಧಿಕಾರಿ ಬಿ.ಪಿ.ಗೀತಾ ಮಾತನಾಡಿ, ಹಸಿರು ನಾಡು ಎನ್ನುವ ಮಂಡ್ಯ ಜಿಲ್ಲೆಯಲ್ಲಿ ಈ ಬಾರಿಯ ಬೇಸಿಗೆ ಬಿಸಿಲು ಜನರಿಗೆ ಎಷ್ಟೊಂದು ಕಷ್ಟ ಕೊಟ್ಟಿದೆ ಎಂಬುದನ್ನು ಅರಿತು ಪರಿಸರ ಉಳಿವಿಗಾಗಿ ಜನರು ಗಿಡ ಮರಗಳನ್ನು ಬೆಳೆಸಿ. ಮನುಷ್ಯ ದುರಾಸೆಯಿಂದ ಪರಿಸರವನ್ನು ಹಾಳು ಮಾಡುತ್ತಿದ್ದಾನೆ. ಮುಂದಿನ ಪೀಳಿಗೆಗೆ ಪರಿಸರದ ಉಳಿಸಲು ಇಂತಹ ಚಿತ್ರಕಲಾ ಸ್ಪರ್ಧೆಗಳನ್ನು ವಿದ್ಯಾರ್ಥಿಗಳಿಗೆ ಏರ್ಪಡಿಸಿ ಅರಿವು ಮೂಡಿಸಲಾಗುತ್ತಿದೆ. 1972ರಿಂದ ವಿಶ್ವ ಪರಿಸರ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದ್ದು, ಈ ವರ್ಷ ನಮ್ಮ ಭೂಮಿ ನಮ್ಮ ಭವಿಷ್ಯ ಎಂಬ ಘೋಷವಾಕ್ಯದಡಿ ವಿಶ್ವ ಪರಿಸರ ದಿನ ಆಚರಿಸಲಾಗುತ್ತಿದೆ ಎಂದರು.

ಪರಿಸರ ಸಂಸ್ಥೆಯ ಅಧ್ಯಕ್ಷ ಮಂಗಲ ಎಂ.ಯೋಗೀಶ್ ಮಾತನಾಡಿ, ರಚನಾತ್ಮಕವಾಗಿ ಪರಿಸರಸ್ನೇಹಿ ಚಟುವಟಿಕೆಗಳನ್ನು ಯುವ ಜನತೆಯಲ್ಲಿ ಹಮ್ಮಿಕೊಳ್ಳುವ ಮೂಲಕ ಕಾರ್ಯಕ್ರಮ ರೂಪಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಕುರಿತು ಚಿತ್ರಕಲಾ ಸ್ಪರ್ಧೆ ಏರ್ಪಡಿಸಿರುವುದರಿಂದ ಅರಿವು ಮೂಡುತ್ತದೆ. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರದಲ್ಲಿ ಸೈಕಲ್ ಜಾಥಾ ಹಮ್ಮಿಕೊಳ್ಳುವ ಮೂಲಕ ಜಾಗೃತಿ ಮೂಡಿಸಲಾಗುವುದು. ಅಂತೆಯೇ ಮಿಮ್ಸ್ ಆಸ್ಪತ್ರೆಯ ರೋಗಿಗಳಿಗೆ ಪರಿಸರಸ್ನೇಹಿ ಬಟ್ಟೆ ಬ್ಯಾಗುಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಉಪ ಪರಿಸರ ಅಧಿಕಾರಿಗಳಾದ ಅಶ್ವಿನಿ, ಭವ್ಯಾ, ಗಾಯಕ ಸಂತೆಕಸಲಗೆರೆ ಬಸವರಾಜ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net