

ಮಂಡ್ಯ: ಪರಿಸರದಲ್ಲಿರುವ ಗಾಳಿ, ಬೆಳಕು ಮತ್ತು ನೀರು ಮನುಷ್ಯನಿಗೆ ಜೀವ ನೀಡಿದೆ. ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸಂರಕ್ಷಣೆ ಮಾಡುವುದು ಸಾರ್ವಜನಿಕರಾದ ನಮ್ಮೆಲ್ಲರ ಹೊಣೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.
ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು(ಕಲ್ಲುಕಟ್ಟಡ) ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯಿತಿ, ಅರಣ್ಯ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಅನನ್ಯ ಹಾರ್ಟ್ ಸಂಸ್ಥೆ, ಅಚೀವರ್ಸ್ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್ ಸಾತನೂರು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಯುವ ಪೀಳಿಗೆ ಪರಿಸರವನ್ನು ಪೋಷಿಸುವ ಬಗ್ಗೆ ನಿರಾಸಕ್ತಿ ತೋರುತ್ತಿದ್ದಾರೆ. ಪ್ರಸ್ತುತ ಸನ್ನಿವೇಶದಲ್ಲಿ ಶಾಲಾ ಕಾಲೇಜು ಮಕ್ಕಳಿಗೆ ಪರಿಸರದ ಜಾಗೃತಿಯ ಕುರಿತು ಅರಿವು ಮೂಡಿಸುವ ಅಗತ್ಯವಿದೆ. ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನಿರ್ಮಾಣ ಮಾಡಲು ಜಲ, ವಾಯು ಮತ್ತು ಶಬ್ದ ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿ ಸಹಕಾರ ನೀಡೋಣ ಎಂದು ಕರೆ ನೀಡಿದರು.
ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶ ಆನಂದ್, ಜಿಪಂ ಸಿಇಒ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನವ್ಯಶ್ರೀ, ವಕೀಲರ ಸಂಘದ ಅಧ್ಯಕ್ಷ ರಾಜೇಂದ್ರ, ಮಂಡ್ಯ ಅರಣ್ಯ ವಿಭಾಗ ಎಸಿಎಫ್ ಮಹದೇವಸ್ವಾಮಿ, ಪ್ರಾಂಶುಪಾಲ ತಮ್ಮೇಗೌಡ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತಿಮ್ಮರಾಜು, ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತೆ ಬಿ.ಎಸ್.ಅನುಪಮಾ ಇತರರಿದ್ದರು.