

ಉಡುಪಿ: ಯುವಜನತೆಯಲ್ಲಿ ಹೆಚ್ಚಾಗಿ ಹೃದಯಾಘಾತ ಸಂಭವಿಸಲು ಧೂಮಪಾನ, ಜೆನೆಟಿಕ್ ಹಾಗೂ ಕಾರ್ಯದೊತ್ತಡವೇ ಮುಖ್ಯ ಕಾರಣ. ಹೀಗಾಗಿ ದುಶ್ಚಟಗಳಿಂದ ದೂರವಿದ್ದು, ಉತ್ತಮ ಆಹಾರ ಪದ್ಧತಿ, ವ್ಯಾಯಾಮ ಅಳವಡಿಸಿಕೊಳ್ಳಬೇಕು ಎಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಹೃದ್ರೋಗ ತಜ್ಞೆ ಡಾ.ಮೋನಿಕಾ ಜೆ. ಹೇಳಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ವಿಶ್ವ ಹೃದಯ ದಿನದ ಪ್ರಯುಕ್ತ ಜಿಲ್ಲೆಯ ಪತ್ರಕರ್ತರಿಗಾಗಿ ನಡೆದ ಹೃದಯ ಆರೋಗ್ಯ ಮತ್ತು ತುರ್ತು ಆರೈಕೆ ಪ್ರಾತ್ಯಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೊರೋನಾ ಸೇರಿದಂತೆ ಎಲ್ಲ ರೀತಿಯ ವೈರಸ್ಗಳು ಕೂಡ ಹೃದಯಕ್ಕೆ ಅಪಾಯ ತಂದೊಡ್ಡುತ್ತದೆ. ಕೊರೋನಾ ಲಸಿಕೆಯಿಂದ ಹೃದಯಾಘಾತಗಳು ಸಂಭವಿಸುವುದು ಈವರೆಗೆ ಸಾಬೀತಾಗಿಲ್ಲ. 40 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ನಿಯಮಿತ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಮಾರ್ಕೆಟಿಂಗ್ ವ್ಯವಸ್ಥಾಪಕ ಮೋಹನ್ ಶೆಟ್ಟಿ ಮಾತನಾಡಿ, ವಿಶ್ವ ಹೃದಯ ದಿನದ ಪ್ರಯುಕ್ತ ಆಸ್ಪತ್ರೆಯು ಪೊಲೀಸ್ ಸಿಬ್ಬಂದಿ, ಆಂಬ್ಯುಲೆನ್ಸ್ ಚಾಲಕರು, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಮೆಸ್ಕಾಮ್ ಉದ್ಯೋಗಿಗಳು ಸೇರಿದಂತೆ ವಿವಿಧ ಸಾರ್ವಜನಿಕ ಸೇವಾನಿರತರಿಗೆ ತರಬೇತಿ ಕಾರ್ಯಕ್ರಮ ನಡೆಸುತ್ತಿದೆ ಎಂದು ತಿಳಿಸಿದರು. ಆಸ್ಪತ್ರೆಯ ತುರ್ತು ವೈದ್ಯಕಿಯ ಸಲಹೆಗಾರ ಡಾ.ಆಕಾಶ್ ಕಲ್ಲೂರೆ ಬಿಎಲ್ಎಸ್ ಮತ್ತು ಸಿಪಿಆರ್ನ ಪ್ರಾಯೋಗಿಕ ತರಬೇತಿಯನ್ನು ನೀಡಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ಖಜಾಂಚಿ ಉಮೇಶ್ ಮಾರ್ಪಳ್ಳಿ ಉಪಸ್ಥಿತರಿದ್ದರು. ಕಾರ್ಯದರ್ಶಿ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಭಾಗವಾಗಿ ಪತ್ರಕರ್ತರಿಗೆ ಉಚಿತ ಬಿಪಿ ತಪಾಸಣೆ, ರಕ್ತ ಪರೀಕ್ಷೆ ಮತ್ತು ಇಸಿಜಿ ತಪಾಸಣೆಗಳನ್ನು ನಡೆಸಲಾಯಿತು.