ಗರ್ಭಿಣಿಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಹೆಪಟೈಟಿಸ್: ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್ ಹೇಳಿಕೆ

1
Published on

ಮಂಡ್ಯ: ಹೆಪಟೈಟಿಸ್ ರೋಗ ಹೆಚ್ಚಾಗಿ ಗರ್ಭಿಣಿಯಲ್ಲಿ ಕಾಣಿಸಿಕೊಳ್ಳುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಶನಿವಾರ ವಿಶ್ವ ಹೆಪಟೈಟಿಸ್ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಜಾಥಾದಲ್ಲಿ ಮಾತನಾಡಿದ ಅವರು, ಈ ರೋಗವು ರಕ್ತ ಮತ್ತು ಲೈಂಗಿಕ ಕ್ರಿಯೆ, ಕಲುಷಿತ ಆಹಾರ ಮತ್ತು ನೀರಿನಿಂದ ಹರಡುತ್ತದೆ. ಇದರ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಹಲವಾರು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ 20,862 ಮಹಿಳೆಯರನ್ನು ಪರೀಕ್ಷೆಗೆ ಒಳಪಡಿಸಿದ್ದು, ಅವರಲ್ಲಿ ಯಾವುದೇ ರೋಗದ ಲಕ್ಷಣಗಳು ಕಂಡುಬಂದಿಲ್ಲ. ಇನ್ನು ಯಾವುದಾದರೂ ಮಗುವಿಗೆ ಪಾಸಿಟಿವ್ ಬಂದರೆ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದು ಹೇಳಿದರು.

ಜಾಥಾಕ್ಕೆ ಚಾಲನೆ ನೀಡಿದ ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಮಾತನಾಡಿ, ಸುಮಾರು 2 ತಿಂಗಳಿಂದ ಎಚ್‌ಬಿ ವೈರಸ್ ಪತ್ತೆ ಹಚ್ಚಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ವೈರಸ್ ಮಾನವ ದೇಹದ ಯಕೃತ್ತು ಅಂಗವನ್ನು ಹೆಚ್ಚಾಗಿ ಬಾಧಿಸುತ್ತದೆ. ಅದರಿಂದ ಸಾರ್ವಜನಿಕರು ಇದರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ತಿಳಿಸಿದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶಶಿಧರ್, ಡಿಟಿಒ ಡಾ.ಆಶಾಲತಾ, ಡಿಎಲ್‌ಒ ಡಾ.ಅಶ್ವಥ್, ಡಿಎಸ್‌ಒ ಡಾ.ಕುಮಾರ್, ಡಾ.ಕಾಂತಾರಾಜು, ತಾಲೂಕು ಆರೋಗ್ಯಾಧಿಕಾರಿ ಡಾ.ಜವರೇಗೌಡ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾ.ವೇಣುಗೋಪಾಲ್ ಇತರರಿದ್ದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮ ಕುರಿತಾದ ಸಮಗ್ರ ಮಾಹಿತಿ ಇರುವ ಕೈಪಿಡಿ ಬಿಡುಗಡೆ ಮಾಡಲಾಯಿತು. ಜಾಥಾವು ಜಿಪಂ ಕಚೇರಿಯಿಂದ ಹೊರಟು ವಿಶ್ವೇಶ್ವರಯ್ಯ ಪ್ರತಿಮೆ ಎದುರು ಅಂತ್ಯಗೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net