ಮೈಸೂರಿನಲ್ಲಿ ಸೆ.27 ರಂದು ವಿಶ್ವ ಪ್ರವಾಸೋದ್ಯಮ ದಿನ ಆಚರಣೆ

World Tourism Day celebration on September 27 in Mysore
Published on

ಮೈಸೂರು: ಈ ಬಾರಿ ವಿಶ್ವ ಪ್ರವಾಸೋದ್ಯಮ ದಿನವನ್ನು ‘ಪ್ರವಾಸೋದ್ಯಮ ಮತ್ತು ಶಾಂತಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಸೆ.27ರಂದು ನಗರದ ಅರಮನೆ ಆವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅಧ್ಯಕ್ಷತೆಯಲ್ಲಿ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ವಿಶ್ವ ಪ್ರವಾಸೋ ದ್ಯಮ ದಿನ ಆಚರಣೆ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಈ ಬಾರಿ ಪ್ರವಾಸೋದ್ಯಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಸುದೀರ್ಘ ಚರ್ಚೆ ನಡೆಯಿತು. ಸಭೆಗೆ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ವಿವಿಧ ಸಂಘ ಸಂಸ್ಥೆಗಳ ಮುಖಂಡರನ್ನು ಆಹ್ವಾನಿಸಿ ಸಲಹೆಗಳನ್ನು ಸ್ವೀಕಾರ ಮಾಡಲಾಯಿತು.

ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ವಿಷಯದ ಮೇಲೆ ಹತ್ತು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಉತ್ತಮ ಪರಿಕಲ್ಪನೆಯಾಗಿದೆ. ಕಾರ್ಯಕ್ರಮದ ದಿನದಂದು ಅರಮನೆಯ ಮುಂಭಾಗದಲ್ಲಿ ಹೆಚ್ಚಿನ ಅತಿಥಿ ಪ್ರವಾಸಿಗರನ್ನು ಆಹ್ವಾನಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಸಲಹೆ ನೀಡಿದರು.

ಆಕರ್ಷಕ ಮೆರವಣಿಗೆ: ನಗರದಲ್ಲಿ ಸೆ.27 ರಂದು ಹಮ್ಮಿಕೊಂಡಿರುವ ಪ್ರವಾಸೋದ್ಯಮ ದಿನ ಕಾರ್ಯಕ್ರಮದಲ್ಲಿ ನಾಡಹಬ್ಬ ದಸರಾ ಉತ್ಸವದ ಜಂಬೂ ಸವಾರಿ ಮೆರವಣಿಗೆಯನ್ನು ನೆನಪಿಸುವ ಮಾದರಿಯಲ್ಲಿ ಅದ್ದೂರಿ ಸಾಂಸ್ಕೃತಿಕ ಮೆರವಣಿಗೆ ನಡೆಸಲು ತೀರ್ಮಾನಿಸಲಾಗಿದೆ. ಅಂದು ಬೆಳಗ್ಗೆ 10ಕ್ಕೆ ನಗರದ ಅರಮನೆ ಆವರಣದಲ್ಲಿ ಪ್ರವಾಸಿಗರನ್ನು ಸಾಂಪ್ರದಾಯಿಕವಾಗಿ ಬರ ಮಾಡಿಕೊಳ್ಳಲಾಗುವುದು. ಆ ನಂತರ ಅರಮನೆ ಆವರಣದಿಂದ ಸಯ್ಯಜಿರಾವ್ ರಸ್ತೆ ಮೂಲಕ ಹೈವೇ ವೃತ್ತದವರೆಗೆ ಆಕರ್ಷಕ ಸಾಂಸ್ಕೃತಿಕ ಮೆರವಣಿಗೆ ನಡೆಸಲಾಗುವುದು. ವಿವಿಧ ಸಾಂಸ್ಕೃತಿಕ ಹಾಗೂ ಜಾನಪದ ಕಲಾ ತಂಡಗಳ ಮೆರಣಿಗೆಗೆ ಮೆರವಣಿಗೆಗೆ ಮೆರಗು ನೀಡಲಿದೆ. ಈ ಮೆರವಣಿಗೆಯಲ್ಲಿ ದಸರಾ ಉತ್ಸವದಲ್ಲಿ ಪಾಲ್ಗೊಳ್ಳುವ ಆನೆಗಳು ಪಾಲ್ಗೊಳ್ಳಲಿವೆ.

ಮಧ್ಯರಾತ್ರಿವರೆಗೆ ವ್ಯಾಪಾರಕ್ಕೆ ಅವಕಾಶ ನೀಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಮೈಸೂರಿನಲ್ಲಿ ಮಧ್ಯರಾತ್ರಿ 1ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡುವುದಾಗಿ ಘೋಷಿಸಿದ್ದು, ಸರ್ಕಾರದ ಈ ನಿರ್ಧಾರವನ್ನು ಜಾರಿಗೊಳಿಸಬೇಕು ಎಂದು ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ. ನಾರಾಯಣ ಗೌಡ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರನ್ನು ಗಮನ ಸೆಳೆದರು.

ಸಭೆಯಲ್ಲಿ ಮೈಸೂರು ಅರಮನೆ ಮಂಡಳಿಯ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಭುಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎಂ.ಡಿ.ಸುದರ್ಶನ್, ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ. ನಾರಾಯಣ ಗೌಡ, ಮೈಸೂರು ಸಂಘ ಸಂಸ್ಥೆಗಳ ಒಕ್ಕೂಟ ಅಧ್ಯಕ್ಷ ಪ್ರಶಾಂತ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net