

ಮೈಸೂರು: ನಗರದ ಅಂಬಾವಿಲಾಸ ಅರಮನೆ ಆವರಣದಲ್ಲಿ ಗುರುವಾರ ವಿಶ್ವ ಪ್ರವಾಸೋದ್ಯಮ ದಿನವನ್ನು ಸಡಗರ, ಸಂಭ್ರಮದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಪ್ರವಾಸೋದ್ಯಮ ಇಲಾಖೆ, ಅರಮನೆ ಮಂಡಳಿ, ಮೈಸೂರು ಟ್ರಾವೆಲ್ಸ್ ಅಸೋಸಿಯೇಷನ್ ಮತ್ತು ಮೈಸೂರು ಹೋಟೆಲ್ ಮಾಲೀಕರ ಸಂಘದಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅರಮನೆಯ ದಕ್ಷಿಣ ದ್ವಾರದಲ್ಲಿ ಜಿಲ್ಲಾಧಿಕಾರಿ ಡಾ ಕೆ.ವಿ. ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಪ್ರವಾಸಿಗರಿಗೆ ಗುಲಾಬಿ ಹೂ, ಮೈಸೂರು ಪಾಕ್ ಹಾಗೂ ಪ್ರವಾಸಿ ಮಾರ್ಗದರ್ಶಿ ಪುಸ್ತಕವನ್ನು ನೀಡಿ ಬರಮಾಡಿಕೊಂಡರು.
ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ, ಮೈಸೂರು ವಿಶ್ವ ಭೂಪಟದಲ್ಲಿ ಪ್ರವಾಸೋದ್ಯಮ ಕೇಂದ್ರವಾಗಿ ಗುರುತಿಸಿಕೊಂಡಿದ್ದು, ಮೈಸೂರು ಪ್ರವಾಸೋದ್ಯಮ ಕ್ಷೇತ್ರದ ಬೆಳವಣಿಗೆಗೆ ವಿಫುಲವಾದ ಅವಕಾಶಗಳು ಇವೆ. ಜಿಲ್ಲೆಯಲ್ಲಿ 30ಕ್ಕೂ ಹೆಚ್ಚು ಪ್ರಮುಖ ಪ್ರವಾಸಿ ತಾಣಗಳು ಇವೆ. ಆ ತಾಣಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಒತ್ತು ನೀಡುವುದು ಹಾಗೂ ನಮ್ಮ ಕಲೆ, ಸಂಸ್ಕೃತಿಯನ್ನು ಜಗತ್ತಿಗೆ ತೋರಿಸಲು ಪಣ ತೊಡುವ ದಿನ ಇದಾಗಿದೆ ಎಂದರು.
ಈ ಸಂದರ್ಭ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಎಂ.ಕೆ. ಸವಿತಾ, ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ, ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ರಾಘವೇಂದ್ರ, ಉಪ ಮೇಯರ್ ಡಾ.ಜಿ. ರೂಪಾ ಹಾಗೂ ಇತರರು ಇದ್ದರು.