ಮೈಸೂರು ಪ್ರವಾಸಿ ತಾಣಗಳ ‘ವಿಶ್ವ ದರ್ಶನ’

mysore palace
Published on

ಮೈಸೂರು: ವಿಶ್ವ ಪ್ರವಾಸೋದ್ಯಮ ದಿನಾಚರಣೆ ಹಾಗೂ ನಾಡಹಬ್ಬ ದಸರಾ ಉತ್ಸವ ಸಂದರ್ಭದಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳನ್ನು ವಿಶ್ವಕ್ಕೆ ಪರಿಚಯಿಸುವ ವಿನೂತನ ಪ್ರಯತ್ನವನ್ನು ಕೇಂದ್ರ ಹಾಗೂ ರಾಜ್ಯ ಪ್ರವಾಸೋದ್ಯಮ ಇಲಾಖೆ ಕೈಗೊಂಡಿದೆ.

ವಿಶ್ವದ ಮೂಲೆ ಮೂಲೆಗಳಿಂದ ಪ್ರವಾಸಿಗರನ್ನು ಸೆಳೆಯುವಷ್ಟು ಆಕರ್ಷಕ ಪ್ರವಾಸಿ ತಾಣಗಳು ಜಿಲ್ಲೆಯಲ್ಲಿದ್ದರೂ ಪ್ರಚಾರದ ಕೊರತೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಸಾಧ್ಯವಾಗುತ್ತಿಲ್ಲ. ಈ ಕೊರತೆಯನ್ನು ನೀಗಿಸುವ ಸಲುವಾಗಿ ವಿಶ್ವದ ಅತ್ಯುತ್ತಮ ಬ್ಲಾಗರ್‌ಗಳನ್ನು ಜಿಲ್ಲೆಗೆ ಆಹ್ವಾನಿಸಿ ಅವರ ಮೂಲಕ ಜಿಲ್ಲೆಯ ಪ್ರವಾಸಿ ತಾಣಗಳನ್ನು ವಿಶ್ವಕ್ಕೆ ಪರಿಚಯಿಸುವ ಪ್ರಯತ್ನ ನಡೆದಿದೆ.

ಬ್ಲಾಗರ್‌ಗಳು ಜಿಲ್ಲೆಗೆ ಸೆ.11 ರಂದು ಆಗಮಿಸಲಿದ್ದು, ಸೆ.12 ರಂದು ತಿ.ನರಸೀಪುರ ತಾಲೂಕಿನ ಸೋಮನಾಥಪುರದ ಶ್ರೀ ಚೆನ್ನಕೇಶವ ದೇವಾಲಯದಲ್ಲಿ ಹಮ್ಮಿಕೊಂಡಿರುವ ಸೋಮನಾಥಪುರ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಚೆನ್ನಕೇಶವ ದೇವಾಲಯ ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ತಾಣಗಳ ಪಟ್ಟಿಯಲ್ಲಿದ್ದರೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ದೇವಾಲಯಕ್ಕೆ ಭೇಟಿ ನೀಡುತ್ತಿಲ್ಲ. 2023ರಲ್ಲಿ ಈ ದೇವಾಲಯಕ್ಕೆ ಯುನೆಸ್ಕೋ ಮಾನ್ಯತೆ ದೊರೆತ ನಂತರವೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿಲ್ಲ. ಈ ದೇವಾಲಯದ ಕುರಿತು ವಿಶ್ವಾದ್ಯಂತ ವ್ಯಾಪಕ ಪ್ರಚಾರ ಕೈಗೊಂಡರೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆ ಇದೆ.

ಬ್ಲಾಗರ್‌ಗಳು ಒಟ್ಟು ನಾಲ್ಕು ದಿನಗಳ ಕಾಲ ಜಿಲ್ಲೆಯಲ್ಲಿ ಉಳಿಯಲಿದ್ದಾರೆ. ಈ ಸಂದರ್ಭ ಅವರು ಮೈಸೂರು ಅರಮನೆ, ಸೋಮನಾಥಪುರದ ಶ್ರೀ ಚೆನ್ನಕೇಶವ ದೇವಾಲಯ, ಬಂಡೀಪುರ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಲಿದ್ದಾರೆ. ಪ್ರವಾಸಿ ತಾಣಗಳ ಜತೆಗೆ ಜಿಲ್ಲೆಯ ಕಲೆ, ಸಂಸ್ಕೃತಿಯನ್ನು ಪರಿಚಯಿಸುವ ಕಾರ್ಯ ಸಹ ಇದೇ ಸಂದರ್ಭದಲ್ಲಿ ನಡೆಯಲಿದೆ.

ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಸೆಳೆಯುವ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಪ್ರವಾಸೋದ್ಯಮ ಇಲಾಖೆ ಮೂಲಕ ಜಿಲ್ಲೆಗೆ ವಿಶ್ವದ ವಿವಿಧ ಭಾಗಗಳಿಂದ ಬ್ಲಾಗರ್‌ಗಳನ್ನು ಆಹ್ವಾನಿಸಲಾಗಿದೆ. ಅವರು ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ತಮ್ಮ ಬ್ಲಾಗ್‌ನಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳನ್ನು ಬಿತ್ತರಿಸಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಜಿಲ್ಲೆಯತ್ತ ಸೆಳೆಯುಂತೆ ಮಾಡಲಿದ್ದಾರೆ.
ಎಂ.ಕೆ.ಸವಿತಾ, ಜಂಟಿ ನಿರ್ದೇಶಕಿ, ಪ್ರವಾಸೋದ್ಯಮ ಇಲಾಖೆ

ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಸೆಳೆಯುವ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಪ್ರವಾಸೋದ್ಯಮ ಇಲಾಖೆ ಮೂಲಕ ಜಿಲ್ಲೆಗೆ ವಿಶ್ವದ ವಿವಿಧ ಭಾಗಗಳಿಂದ ಬ್ಲಾಗರ್‌ಗಳನ್ನು ಆಹ್ವಾನಿಸಲಾಗಿದೆ. ಅವರು ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ತಮ್ಮ ಬ್ಲಾಗ್‌ನಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳನ್ನು ಬಿತ್ತರಿಸಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಜಿಲ್ಲೆಯತ್ತ ಸೆಳೆಯುಂತೆ ಮಾಡಲಿದ್ದಾರೆ.
ಎಂ.ಕೆ.ಸವಿತಾ,
ಜಂಟಿ ನಿರ್ದೇಶಕಿ, ಪ್ರವಾಸೋದ್ಯಮ ಇಲಾಖೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net