ಗಣರಾಜ್ಯೋತ್ಸವದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಕಡ್ಡಾಯ

ಫೋಟೋ ಶೀರ್ಷಿಕೆ ,18 ಸಿಆರ್_ಪಿ-2ಎ
ಚನ್ನರಾಯಪಟ್ಟಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಶಾಸಕ ಸಿ.ಎನ್.ಬಾಲಕೃಷ್ಣ ಮಾತನಾಡಿದರು.
Published on

ಚನ್ನರಾಯಪಟ್ಟಣ: ಗಣರಾಜ್ಯೋತ್ಸವ ಆಚರಣೆ ಸಂದರ್ಭ ಕಡ್ಡಾಯವಾಗಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಸಂಬಂಧ ಸುತ್ತೋಲೆ ಹೊರಡಿಸಬೇಕು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಸೂಚಿಸಿದರು.

ಗಣರಾಜ್ಯೋತ್ಸವ ಆಚರಣೆ ಸಂಬಂಧ ಬುಧವಾರ ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಜ.26 ರಂದು ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ರಾಜಪ್ರಭುತ್ವ ತ್ಯಜಿಸಿ ಪ್ರಜಾಪ್ರಭುತ್ವದಲ್ಲಿ ಅಸ್ತಿತ್ವ ಸ್ಥಾಪಿತ ದಿನವಾದ್ದರಿಂದ ಗಣರಾಜ್ಯೋತ್ಸವ ಭಾರತೀಯರ ಪಾಲಿಗೆ ಅತ್ಯಂತ ಮಹತ್ವವಾದದ್ದು ಎಂದು ಹೇಳಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಅಂದು ಬೆಳಗ್ಗೆ 10 ಗಂಟೆಗೆ ಧ್ವಜಾರೋಹಣ ನೆರವೇರಿಸಲಾಗುವುದು. ನಂತರ ಪೊಲೀಸ್, ಎನ್‌ಸಿಸಿ, ಸ್ಕೌಟ್ ಮತ್ತು ಗೈಡ್ಸ್, ಗ್ರಹರಕ್ಷಕ ದಳದಿಂದ ಪಥಸಂಚಲನ ನಡೆಯಲಿದೆ. ಇದರೊಂದಿಗೆ ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿವೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮ ಸ್ಥಳದಲ್ಲಿ ಸ್ವಚ್ಛತೆ, ಅತಿಥಿಗಳಿಗೆ ಆಸನ ವ್ಯವಸ್ಥೆ ಮಾಡಬೇಕು. ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಆಮಂತ್ರಣ ಪತ್ರವನ್ನು ಶಿಷ್ಟಾಚಾರದಂತೆ ಮುದ್ರಿಸಿ ಗಣ್ಯರಿಗೆ ಮುಂಚಿತವಾಗಿ ತಲುಪಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಎಲ್ಲೂ ಶಿಷ್ಟಾಚಾರ ಉಲ್ಲಂಘನೆಯಾಗದಂತೆ ಎಚ್ಚರವಹಿಸಬೇಕು ಎಂದು ನಿರ್ದೇಶನ ನೀಡಿದರು.

ಕಾರ್ಯಕ್ರಮಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿಯೊಂದಿಗೆ ಉಪಾಹಾರ ನೀಡಬೇಕು. ಜತೆಗ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಪಟ್ದಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದರ ಜತೆಗೆ ಎರಡು ದಿನಗಳ ಕಾಲ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು. ಸರ್ಕಾರಿ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು, ಆಯಾ ಇಲಾಖೆಗೆ ವಹಿಸಿಕೊಟ್ಟ ಕಾರ್ಯವನ್ನು ಯಶಸ್ವಿಯಾಗಿ ನೆರವೇರಿಸಬೇಕು ಎಂದು ಸೂಚನೆ ನೀಡಿದರು.

ಸಾಂಸ್ಕೃತಿಕ ಕಾರ್ಯಕ್ರಮ, ಮೂಲ ಸೌಕರ್ಯ, ವೇದಿಕೆ ನಿರ್ಮಾಣ ಕುರಿತ ಮುಂತಾದ ವಿಷಯಗಳ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಗ್ರೇಡ್ 2 ತಹಸೀಲ್ದಾರ್ ನಾಗರಾಜ್, ಪುರಸಭಾ ಮುಖ್ಯಾಧಿಕಾರಿ ಕೆ.ಎನ್.ಹೇಮಂತ್, ಡಿವೈಎಸ್ಪಿ ರವಿಪ್ರಸಾದ್, ವೃತ್ತ ನಿರೀಕ್ಷಕ ಕೆ.ಎಂ.ವಸಂತ್, ತಾಲೂಕು ಪಂಚಾಯಿತಿ ಇಒ ಜಿ.ಆರ್.ಹರೀಶ್, ಶಿರಸ್ತೇದಾರ್ ಬಿ.ಎಸ್.ಪವನ್, ಕನ್ನಡ ಸಾಹಿತ್ಯ ಪರಿಷತ್‌ನ ತಾಲೂಕು ಅಧ್ಯಕ್ಷ ಹಡೇನಹಳ್ಳಿ ಲೋಕೇಶ್, ಪರಿಸರವಾದಿ ಚ.ನಾ.ಅಶೋಕ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net