

ಬೀದರ್: ಚಿಟಗುಪ್ಪ ತಾಲ್ಲೂಕಿನ ಮನ್ನಾಎಖ್ಖೆಳ್ಳಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಅಗೌರವ ತೋರಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ವೀರಶೆಟ್ಟಿ ಗೌಸಪುರೆ ಆರೋಪಿಸಿದ್ದಾರೆ.
ಈ ಕುರಿತು ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಪಟೇಲರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ವೇಳೆ ವೈದ್ಯಾಧಿಕಾರಿ ಲಕ್ಷ್ಮಣ ಜಾಧವ್ ಅವರು ಭಾವಚಿತ್ರವಿದ್ದ ಕುರ್ಚಿ ಕೆಳಗೆ ಪಾದರಕ್ಷೆ ಇಟ್ಟು ಅಗೌರವ ತೋರಿದ್ದಾರೆ ಎಂದು ದೂರಿದ್ದಾರೆ.
ಕೂಡಲೇ ವೈದ್ಯಾಧಿಕಾರಿ ವಿರುದ್ಧ ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.