ಎಲ್ಲ ಠಾಣೆಗಳಲ್ಲಿ ತೆರೆದ ಮನೆ ಕಾರ್ಯಕ್ರಮ ನಡೆಯಲಿ

gurukul
Published on

ಭಾಲ್ಕಿ: ಮಕ್ಕಳ ಹಕ್ಕುಗಳ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸಲು ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಲ್ಲಿ ಪ್ರತಿ ಗುರುವಾರ ತೆರೆದ ಮನೆ ಕಾರ್ಯಕ್ರಮ ನಡೆಯಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು.
ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲದಲ್ಲಿ ಗ್ರಾಮೀಣ ಪೊಲೀಸ್ ಠಾಣೆ ಆಯೋಜಿಸಿದ್ದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೋ) ಕಾಯ್ದೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಜನಸ್ನೇಹಿ ಪೊಲೀಸ್ ವ್ಯವಸ್ಥೆ ಭಾಗವಾಗಿ ಸರ್ಕಾರ ತೆರೆದ ಮನೆ ಕಾರ್ಯಕ್ರಮ ನಡೆಸುತ್ತಿದೆ. ಮಕ್ಕಳನ್ನು ಠಾಣೆಗೆ ಕರೆತಂದು ಪೊಲೀಸ್ ವ್ಯವಸ್ಥೆಯ ಬಗ್ಗೆ ಸಂಪೂರ್ಣ ಪರಿಚಯ ಮಾಡಿಕೊಡಲಾಗುತ್ತದೆ. ಇನ್ನು ಕೆಲವೆಡೆ ಪೊಲೀಸರೇ ಶಾಲೆಗಳಿಗೆ ಭೇಟಿ ನೀಡಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾರೆ ಎಂದರು.
ಪ್ರಾಥಮಿಕ, ಪ್ರೌಢ, ಪದವಿಪೂರ್ವ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನ ಪಡೆಯಬೇಕು. ಪ್ರತಿ ಗುರುವಾರ ಎಲ್ಲ ಠಾಣೆಗಳು ಮಕ್ಕಳಿಗೆ ತೆರೆದ ಮನೆಯಂತಾಗಬೇಕು. ಬಾಂಧವ್ಯ ವೃದ್ಧಿ ಮತ್ತು ಶಾಲಾ ಹಂತದಲ್ಲಿ ಮಕ್ಕಳಿಗೆ ಕಾನೂನು ಬಗ್ಗೆ ಅರಿವು ಮೂಡಿಸುವ ಮೂಲಕ ಉತ್ತಮ ನಾಗರಿಕರನ್ನಾಗಿ ರೂಪಿಸಬಹುದು ಎಂಬುದು ಕಾರ್ಯಕ್ರಮದ ಮೂಲ ಉದ್ದೇಶ ಎಂದು ಹೇಳಿದರು.
ಗ್ರಾಮೀಣ ಠಾಣೆ ಪಿಎಸ್ಐ ಸುದರ್ಶನರಡ್ಡಿ ಮಾತನಾಡಿ, ಪೋಕ್ಸೋ ತುಂಬ ಕಠಿಣವಾದದ್ದು. ಈ ಕಾಯ್ದೆ ಕುರಿತು ಮಕ್ಕಳು ಸೇರಿ ಎಲ್ಲ ಜನತೆ ಅರಿವು ಹೊಂದಬೇಕು ಎಂದು ಸಲಹೆ ನೀಡಿದರು.
ಆಡಳಿತಾಧಿಕಾರಿ ಮೋಹನರಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಮುಖ್ಯ ಶಿಕ್ಷಕ ಮಹೇಶ ಮಹಾರಾಜ್, ಶಶಿಕಾಂತ, ಮಧುಕರ ಗಾಂವಕರ್, ಪೊಲೀಸ್ ಸಿಬ್ಬಂದಿ ಪವಿತ್ರಾ, ಗುರುನಾಥ, ಅನೀಲಕುಮಾರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net