ಬೀದರ್ ಜಿಲ್ಲೆಯಿಂದ 450 ಕ್ರೀಡಾಪಟುಗಳು

Rajendrakumar Gandge-2
Published on

ಬೀದರ್: ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ತುಮಕೂರಿನಲ್ಲಿ ಅಕ್ಟೋಬರ್ 27 ರಿಂದ 29 ರ ವರೆಗೆ ನಡೆಯಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ ತಿಳಿಸಿದ್ದಾರೆ.
ತುಮಕೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಕ್ಟೋಬರ್ 27 ರಂದು ಸಂಜೆ 4.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಗೃಹ ಸಚಿವ ಡಾ. ಜಿ. ಪರಮೇಶ್ವರ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ, ಸಹಕಾರ ಸಚಿವ ಕೆ.ಎನ್. ರಾಜಣ್ಣ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಜಿಲ್ಲಾಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾದ 10 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಆನ್‍ಲೈನ್‍ನಲ್ಲಿ ಹೆಸರು ನೋಂದಾಯಿಸಿಕೊಂಡಿರುವ ಕ್ರೀಡಾಪಟುಗಳಿಗೆ ಟ್ರ್ಯಾಕ್ ಪ್ಯಾಂಟ್, ಟೀ ಷರ್ಟ್ ಹಾಗೂ ಕ್ಯಾಪ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಬೀದರ್ ಜಿಲ್ಲೆಯಿಂದ 450 ನೌಕರರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 357 ಜನ ಈಗಾಗಲೇ ಆನ್‍ಲೈನ್‍ನಲ್ಲಿ ಹೆಸರು ನೋಂದಣಿ ಮಾಡಿಸಿದ್ದಾರೆ. ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಸದೇ ಇರುವವರಿಗೆ ಸಂಬಂಧಿಸಿದ ಇಲಾಖೆಯಿಂದ ಗುರುತಿನ ಚೀಟಿ ಕೊಡಲಾಗುವುದು ಎಂದು ಹೇಳಿದ್ದಾರೆ.
ಕಳೆದ ಬಾರಿಯ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಜಿಲ್ಲೆಯ ಕ್ರೀಡಾಪಟುಗಳು ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ತೋರಿದ್ದರು. ಈ ಬಾರಿಯೂ ಜಿಲ್ಲೆಗೆ ಹೆಚ್ಚಿನ ಪ್ರಶಸ್ತಿಗಳು ಬರುವ ನಿರೀಕ್ಷೆ ಇದೆ. ರಾಜ್ಯಮಟ್ಟದಲ್ಲಿ ಸಾಧನೆಗೈದವರಿಗೆ ಸಂಘದ ಜಿಲ್ಲಾ ಘಟಕವು ಬೀದರ್‍ನಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಿದೆ ಎಂದು ತಿಳಿಸಿದ್ದಾರೆ.
ನೌಕರರ ಸಂಘ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಕ್ರೀಡಾಕೂಟದಲ್ಲಿ ಆಯ್ಕೆಯಾದ ಕ್ರೀಡಾಪಟುಗಳು ತಪ್ಪದೆ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net