

ಔರಾದ್: ಪ್ರತಿಯೊಂದು ಮಗುವಿನಲ್ಲೂ ಅಡಗಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ. ಮಕ್ಕಳು ಇದರ ಸದುಪಯೋಗ ಪಡೆಯಬೇಕು ಎಂದು ಶಾಸಕ ಪ್ರಭು ಚವ್ಹಾಣ್ ಹೇಳಿದರು.
ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಹಯೋಗದಡಿ ಪಟ್ಟಣದ ಬಸವನಗರ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಹೆಚ್ಚಿನ ಸಮಯ ಶಾಲೆಯಲ್ಲಿ ಕಳೆಯುವುದರಿಂದ ಅವರ ಪ್ರತಿಭೆಯನ್ನು ಶಿಕ್ಷಕರು ಸುಲಭವಾಗಿ ಗುರುತಿಸಬಹುದು. ಪ್ರತಿಭಾ ಕಾರಂಜಿಯಂಥ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಮಕ್ಕಳನ್ನು ಹುರಿದುಂಬಿಸಬೇಕು ಎಂದು ಸಲಹೆ ನೀಡಿದರು.
ಕ್ಷೇತ್ರದಲ್ಲಿ ಶಿಕ್ಷಣದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗಿದೆ. ಶಾಲಾ-ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಪ್ರತಿ ಶಾಲೆಯಿಂದ ಬೇಡಿಕೆಗಳನ್ನು ಪಡೆದು ಹಂತ-ಹಂತವಾಗಿ ಅಗತ್ಯ ಸೌಕರ್ಯ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
ಶಿಕ್ಷಕರು ಸರಿಯಾಗಿ ಕೆಲಸ ಮಾಡುತ್ತಿದ್ದು, ಫಲಿತಾಂಶ ಸುಧಾರಿಸಲು ಅಕಾರಿಗಳು ಮತ್ತು ಶಿಕ್ಷಕರು ಇನ್ನಷ್ಟು ಪ್ರಯತ್ನ ವಹಿಸಬೇಕು. ಮಕ್ಕಳು ಕಷ್ಟುಪಟ್ಟು ಅಭ್ಯಾಸ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಎಪಿಎಂಸಿ ಅಧ್ಯಕ್ಷ ಧೋಂಡಿಬಾ ನರೋಟೆ, ತಹಸೀಲ್ದಾರ್ ಮಲಶೆಟ್ಟಿ ಚಿದ್ರೆ, ಕಮಲನಗರ ತಾಪಂ ಇಒ ಮಾಣಿಕರಾವ ಪಾಟೀಲ್, ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಲಕ್ಷ್ಮಿ, ಬಿಆರ್.ಸಿ ಪ್ರಕಾಶ ರಾಠೋಡ್, ರಾಮಶೆಟ್ಟಿ ಪನ್ನಾಳೆ ಇತರರಿದ್ದರು.