

ಬೀದರ್: ನಗರದ ಅಂಗಡಿ-ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯ ಕನ್ನಡ ಬಳಕೆಗೆ ಕ್ರಮ ಕೈಗೊಳ್ಳಲು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಜ. 5 ರಂದು ನಗರಸಭೆಗೆ ಮುತ್ತಿಗೆ ಹಾಕಲಾಗುವುದು ಎಂದು ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ ತಿಳಿಸಿದ್ದಾರೆ.
ಅಂದು ಮಧ್ಯಾಹ್ನ 12ಕ್ಕೆ ಬಸವೇಶ್ವರ ವೃತ್ತದಿಂದ ನಗರಸಭೆ ವರೆಗೆ ಮೆರವಣಿಗೆ ನಡೆಸಲಾಗುವುದು. ಬಳಿಕ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದ್ದಾರೆ.
ನಗರದ ಅಂಗಡಿಗಳ ನಾಮಫಲಕಗಳಲ್ಲಿ ಕನ್ನಡವನ್ನು ನಿರ್ಲಕ್ಷಿಸಲಾಗುತ್ತಿದೆ. ಇಂಗ್ಲಿಷ್, ಹಿಂದಿ ನಾಮಫಲಕಗಳೇ ರಾರಾಜಿಸುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಅಂಗಡಿ, ಮಳಿಗೆ, ಸಿನಿಮಾ ಥಿಯೇಟರ್, ಮಾಲ್, ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲ ನಾಮಫಲಕಗಳಲ್ಲಿ ಮೇಲುಗಡೆ ಶೇ 60 ರಷ್ಟು ಭಾಗದಲ್ಲಿ ಕಡ್ಡಾಯವಾಗಿ ಕನ್ನಡ ಬಳಸಬೇಕು ಎಂದು ಆಗ್ರಹಿಸಿದ್ದಾರೆ.
ವೇದಿಕೆಯ ಕಾರ್ಯಕರ್ತರು ಹಾಗೂ ಕನ್ನಡಾಭಿಮಾನಿಗಳು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.