

ಬೀದರ್: ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸಬೇಕು ಎಂದು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಸಿಂಧು ಎಚ್.ಎಸ್. ಸೂಚಿಸಿದರು.
ಔರಾದ್ ಪಟ್ಟಣದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ನಡೆದ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ಹಾಸ್ಟೆಲ್ ವಾರ್ಡನ್‍ಗಳ ಹಾಸ್ಟೆಲ್ ನಿರ್ವಹಣೆ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು.
ಪರೀಕ್ಷೆ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಬೇಕು. ಅಗ್ರಶ್ರೇಣಿಯಲ್ಲಿ ತೇರ್ಗಡೆಯಾಗಲು ಪ್ರೇರಣೆ ನೀಡಬೇಕು ಎಂದು ತಿಳಿಸಿದರು.
ವಿದ್ಯಾರ್ಥಿಗಳ ಶಿಕ್ಷಣ, ಆರೋಗ್ಯ, ಸುರಕ್ಷತೆಗೆ ಆದ್ಯತೆ ಕೊಡಬೇಕು ಎಂದು ಹೇಳಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ, ಮ್ಯಾನುವೆಲ್ ಸ್ಕ್ಯಾವೆಂಜರ್ ಕಾಯ್ದೆ, ಎಸ್‍ಸಿಎಸ್‍ಪಿ, ಟಿಎಸ್‍ಪಿ ಕಾಯ್ದೆ ಕುರಿತು ಮಾಹಿತಿ ನೀಡಿದರು.
ಜಿಲ್ಲೆಯ ಹಾಸ್ಟೆಲ್ ವಾರ್ಡನ್‍ಗಳು ಹಾಸ್ಟೆಲ್ ನಿರ್ವಹಣೆ ವಿವರಣೆ ನೀಡಿದರು.
ಇಲಾಖೆಯ ಔರಾದ್ ತಾಲ್ಲೂಕು ಸಹಾಯಕ ನಿರ್ದೇಶಕ ಅನಿಲಕುಮಾರ ಮೇಲ್ದೊಡ್ಡಿ, ಬೀದರ್ ತಾಲ್ಲೂಕು ಸಹಾಯಕ ನಿರ್ದೇಶಕ ಸುಭಾಷ ನಾಗೂರೆ, ಬಸವಕಲ್ಯಾಣ ತಾಲ್ಲೂಕು ಸಹಾಯಕ ನಿರ್ದೇಶಕ ದಿಲೀಪಕುಮಾರ ಇದ್ದರು.