

ಭಾಲ್ಕಿ: ಗ್ರಾಮೀಣ ಭಾಗದ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್‌ನ ಗುರುಕುಲ ಗೋಲ್ಡನ್ ಸ್ಕಾಲರ್ ಶಿಪ್ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿದ್ಯಾಪೀಠ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.
ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಮತ್ತು ಪ್ರತಿಭಾವಂತರಿಗೆ ಅವಕಾಶ ಕಲ್ಪಿಸುವ ಸದುದ್ದೇಶದಿಂದ ಆರು ವರ್ಷದಿಂದ ಈ ಯೋಜನೆ ಜಾರಿಯಲ್ಲಿದೆ. ಪ್ರಸ್ತುತ ಶೈಕ್ಷಣಿಕ ವರ್ಷ ಎಸ್ಸೆಸ್ಸೆಲ್ಸಿ ಓದುತ್ತಿರುವ ವಿದ್ಯಾರ್ಥಿಗಳು ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆ ಬರೆಯಬಹುದಾಗಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕರಡ್ಯಾಳ ಚನ್ನಬಸವೇಶ್ವರ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ಜ.21, 27 ಮತ್ತು 28ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಇದರಲ್ಲಿ ಉತ್ತಮ ಅಂಕ ಪಡೆಯುವ ನೂರು ವಿದ್ಯಾರ್ಥಿಗಳಿಗೆ ಮುಂದಿನ ಎರಡು ವರ್ಷದ ಪಿಯುಸಿ ಶಿಕ್ಷಣ ಉಚಿತ ನೀಡಲಾಗುತ್ತದೆ. ಕ್ರಮವಾಗಿ ಅತ್ಯುತ್ತಮ ಅಂಕ ಗಳಿಸುವ 25 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವಸತಿ ಮತ್ತು ಕೋಚಿಂಗ್, ನಂತರದ ಅಂಕ ಪಡೆಯುವ 75 ವಿದ್ಯಾರ್ಥಿಗಳಿಗೆ ವಸತಿರಹಿತ ಶಿಕ್ಷಣ ಮತ್ತು ಕೋಚಿಂಗ್ ನೀಡುವುದಾಗಿ ಹೇಳಿದರು.
ಸಂಸ್ಥಾನದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದ ಮಕ್ಕಳ ಪ್ರಗತಿ ದೃಷ್ಟಿಯಿಂದ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಶೈಕ್ಷಣಿಕ ಕೇಂದ್ರ ತೆರೆದು ಬಡ ಮತ್ತು ಪ್ರತಿಭಾನ್ವಿತ ಮಕ್ಕಳಿಗೆ ನೆರವು ನೀಡುತ್ತಿದ್ದಾರೆ. ಗುರುಕುಲದಲ್ಲಿ ಕಲಿತ ಸಾವಿರಾರು ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಉತ್ತಮ ಸಾಧನೆ ತೋರುತ್ತಿದ್ದಾರೆ ಎಂದರು.
ಬಡ ಮಕ್ಕಳ ಶೈಕ್ಷಣಿಕ ಬೆಳವಣಿಗೆ ನಿಟ್ಟಿನಲ್ಲಿ ಗುರುಕುಲ ಸ್ಕಾಲರ್ ಶಿಪ್ ಯೋಜನೆ ಜಾರಿಗೊಳಿಸಲಾಗಿದೆ. ಪ್ರವೇಶ ಪರೀಕ್ಷೆ ದಿನ ಬರುವ ಎಲ್ಲ ಮಕ್ಕಳು ಸೇರಿ ಪಾಲಕರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗುತ್ತಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಶ್ರೀ ಮಹಾಲಿಂಗ ಸ್ವಾಮೀಜಿ, ಪ್ರಾಚಾರ್ಯ ಬಸವರಾಜ ಮೊಳಕೀರೆ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಶಶಿಧರ ಕೋಸಂಬೆ, ಮೋಹನರಡ್ಡಿ ಇದ್ದರು.
6 ಸಾವಿರಕ್ಕೂ ಅಧಿಕ ನೋಂದಣಿ
ಗುರುಕುಲ ಗೋಲ್ಡನ್ ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆಗೆ ಈಗಾಗಲೇ 6000ಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದಾರೆ. ಈ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪ್ರಾಚಾರ್ಯ ಬಸವರಾಜ ಮೊಳಕೀರೆ ಹೇಳಿದರು. ಆರು ವರ್ಷಗಳಿಂದ ವಿದ್ಯಾರ್ಥಿ ವೇತನ ಪರೀಕ್ಷೆ ನಡೆಸಲಾಗುತ್ತಿದೆ. ಇದರಡಿ ಸದುಪಯೋಗ ಪಡೆದ ಶೇ.99 ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಮುಗಿಸಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು. ಎಸ್ಸೆಸ್ಸೆಲ್ಸಿ ಪಠ್ಯಕ್ರಮಕ್ಕೆ ಸಂಬಂಧಿಸಿದಂತೆ ನೂರು ಪ್ರಶ್ನೆಗಳಿದ್ದು, ಬರೆಯಲು 100 ನಿಮಿಷ ಕಾಲಾವಕಾಶ ಇರಲಿದೆ. ಜ.21, 27 ಮತ್ತು 28ರಂದು ಪ್ರವೇಶ ಪರೀಕ್ಷೆ ನಡೆಯಲಿದ್ದು, ಅಂದು ಬೆಳಗ್ಗೆ 9ಕ್ಕೆ ನೋಂದಣಿ ಮಾಡಿಕೊಳ್ಳಬೇಕು. 10ಕ್ಕೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಕ್ಯೂ ಆರ್ ಕೋಡ್ ಮೂಲಕ ಅಥವಾ ಗುರುಕುಲಕ್ಕೆ ಆಗಮಿಸಿ ನೋಂದಣಿ ಮಾಡಿಕೊಳ್ಳಬಹುದು ಎಂದರು.