

ಬೀದರ್: ಸುಳ್ಳು ದೂರು ಕೊಟ್ಟು ಗೊಂಡ ಸಮುದಾಯದ ವ್ಯಕ್ತಿಯೊಬ್ಬರ ಸಾವಿಗೆ ಕಾರಣರಾದ ಕಲಬುರಗಿಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸುಳ್ಳು ಜಾತಿ ತಡೆ ಹೋರಾಟ ಸಮಿತಿಯ ಅಧ್ಯಕ್ಷ ಶ್ರಾವಣಕುಮಾರ ಡಿ. ನಾಯಕ್ ಬಂಧನಕ್ಕೆ ಆಗ್ರಹಿಸಿ ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘವು ಫೆ. 8 ರಂದು ನಗರದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಅಂದು ಬೆಳಿಗ್ಗೆ 11ಕ್ಕೆ ಮಹಾತ್ಮ ಬೊಮ್ಮಗೊಂಡೇಶ್ವರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷಕುಮಾರ ಜೋಳದಾಪಕೆ ತಿಳಿಸಿದ್ದಾರೆ.
ಶ್ರಾವಣಕುಮಾರ ಸುಳ್ಳು ದೂರಿನಿಂದಾಗಿ ಚಿಂಚೋಳಿ ತಾಲ್ಲೂಕಿನ ಚಂದಾಪುರದ ಹನುಮಾನ ನಗರದ ಲಕ್ಷ್ಮಣ ಮಾಣಿಕಪ್ಪ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೀಗಾಗಿ ಶ್ರಾವಣಕುಮಾರ ವಿರುದ್ಧ ಕ್ರಮ ಕೈಗೊಂಡು ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಜಿಲ್ಲೆಯ ಗೊಂಡ ಪರ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ಸಮಾಜದ ಮುಖಂಡರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.