

ಬೀದರ್: ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರ ಏಳನೇ ವೇತನ ಆಯೋಗದ ಆರ್ಥಿಕ ಸೌಲಭ್ಯ ಕಲ್ಪಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ಆಗ್ರಹಿಸಿದೆ.
ಸಂಘದ ರಾಜ್ಯ ಉಪಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಅವರ ನೇತೃತ್ವದಲ್ಲಿ ನಗರದಲ್ಲಿ ಈಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಹಾಗೂ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಅವರಿಗೆ ಈ ಕುರಿತು ಪ್ರತ್ಯೇಕ ಮನವಿ ಪತ್ರ ಸಲ್ಲಿಸಲಾಯಿತು.
ಎನ್‍ಪಿಎಸ್ ರದ್ದುಪಡಿಸಿ ಒಪಿಎಸ್ ಮರು ಜಾರಿಗೊಳಿಸಬೇಕು. ಆರೋಗ್ಯ ಸಂಜೀವಿನಿ ಯೋಜನೆ ಆದಷ್ಟು ಬೇಗ ಅನುಷ್ಠಾನಗೊಳಿಸಬೇಕು ಎನ್ನುವ ಸಂಘದ ಬೇಡಿಕೆಗಳ ಈಡೇರಿಕೆಗೆ ಮುಖ್ಯಮಂತ್ರಿ ಅವರ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.
ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಬಸವರಾಜ ಜಕ್ಕಾ, ಕಾರ್ಯಾಧ್ಯಕ್ಷ ರಾಜಕುಮಾರ ಹೊಸದೊಡ್ಡೆ, ಉಪಾಧ್ಯಕ್ಷರಾದ ಓಂಕಾರ ಮಲ್ಲಿಗೆ, ಡಾ. ವೈಶಾಲಿ, ಪ್ರಧಾನ ಕಾರ್ಯದರ್ಶಿ ರಾಜಶೇಖರ ಮಂಗಲಗಿ, ಸೊಹೆಲ್ ಅಹಮ್ಮದ್, ಗಣಪತಿ ಜಮಾದಾರ್, ಉಮೇಶ ಪಾಟೀಲ, ಶಿವಾನಂದ ಪಾಟೀಲ, ಶಿವಕುಮಾರ ಕಟ್ಟೆ, ವೀರೇಂದ್ರ, ಮಲ್ಲಿಕಾರ್ಜುನ ಸ್ವಾಮಿ, ಪ್ರಮೋದ್ ಭೋಸ್ಲೆ ಮತ್ತಿತರರು ಇದ್ದರು.