

ಭಾಲ್ಕಿ: ಪ್ರಸಕ್ತ ಮುಂಗಾರು ಹಂಗಾಮಿನ ಬಿತ್ತನೆ ಬೀಜದ ದರ ಹೆಚ್ಚಳದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಬೀಜದ ದರ ಕಡಿಮೆ ಮಾಡಬೇಕು ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರ ಬಡವರಿಗೆ ಗ್ಯಾರಂಟಿ ಯೋಜನೆ ಕೊಡುವ ಹೆಸರಿನಲ್ಲಿ ಬಿತ್ತನೆ ಬೀಜದ ದರ ಏರಿಕೆ ಮಾಡಿರುವುದು ಸರಿಯಲ್ಲ. ಕಳೆದ ಮುಂಗಾರು-ಹಿಂಗಾರು ಹಂಗಾಮಿನಲ್ಲಿ ಮಳೆ ಕೊರತೆ, ತೀವ್ರ ಬರದಿಂದ ಸಂಕಷ್ಟಕ್ಕೆ ಸಿಲುಕಿದ್ದ ರೈತರು ಪ್ರಸಕ್ತ ವರ್ಷ ಭರವಸೆಯಿಂದ ಬಿತ್ತನೆ ಮಾಡಲು ಮುಂದಾಗಿದ್ದಾರೆ. ಆದರೆ ಬಿತ್ತನೆ ಬೀಜದ ದರ ಹೆಚ್ಳಳ ಮಾಡಿದ್ದು ಕೃಷಿಕರಿಗೆ ಹೊರೆಯಾಗಿ ಪರಿಣಮಿಸಿದೆ ಎಂದು ತಿಳಿಸಿದ್ದಾರೆ.
ಬರದಿಂದ ಬೆಳೆ ಹಾನಿಯಾಗಿ ನಷ್ಟ ಉಂಟಾಗಿದ್ದರಿಂದ ಈ ಬಾರಿ ರೈತ ಸಂಪರ್ಕ ಕೇಂದ್ರಗಳ ಮೂಲಕ ಕಡಿಮೆ ದರಕ್ಕೆ ಬಿತ್ತನೆ ಬೀಜ ದೊರೆಯುವ ನಿರೀಕ್ಷೆ ಇತ್ತು. ಆದರೆ ದಿಢೀರ್ ದರ ಹೆಚ್ಚಳದಿಂದ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ಕೂಡಲೇ ಸರ್ಕಾರ ಬಿತ್ತನೆ ಬೀಜದ ದರ ಕಡಿಮೆಗೊಳಿಸಿ ರೈತರಿಗೆ ನೆರವಾಗಬೇಕು. ನಿರ್ಲಕ್ಷ್ಯ ಮಾಡಿದರೆ ಹೋರಾಟ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.