ಬ್ರಿಮ್ಸ್ ನಲ್ಲಿ ಕನ್ನಡ ಕಲರವ ಶ್ಲಾಘನೀಯ

brims
Published on

ಬೀದರ್: ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್) ಹಾಗೂ ಬ್ರಿಮ್ಸ್ ಕನ್ನಡ ಸಂಘ ಒಂದು ದಶಕದಿಂದ ಕನ್ನಡ ಕಲರವ ಮೂಡಿಸುತ್ತಿರುವುದು ಶ್ಲಾಘನೀಯ ಎಂದು ಬೆಂಗಳೂರಿನ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಡಾ.ಚನ್ನಬಸವಾನಂದ ಸ್ವಾಮೀಜಿ ಹೇಳಿದರು.
ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬ್ರಿಮ್ಸ್ ಕನ್ನಡ ಸಂಘದ ಸಹಯೋಗದಡಿ ಬ್ರಿಮ್ಸ್ ಸಭಾಂಗಣದಲ್ಲಿ ಆಯೋಜಿಸಿದ್ದ ಕನ್ನಡ ಕಲೋತ್ಸವದಲ್ಲಿ ಸಾನ್ನಿಧ್ಯ ವಹಿಸಿದ್ದ ಅವರು, ವೈದ್ಯರು ದೇವರಿಗೆ ಸಮಾನ. ರೋಗಿಗಳ ನೋವು ಅರ್ಥ ಮಾಡಿಕೊಳ್ಳುವ ಶಕ್ತಿ ವೈದ್ಯರಲ್ಲಿ ಇರಬೇಕು. ರೋಗಿಗಳನ್ನು ವಿನಯ ಮತ್ತು ಪ್ರೀತಿಯಿಂದ ಮಾತನಾಡಿಸಿ ರೋಗ ಗುಣಪಡಿಸುವ ಮಾನವೀಯತೆ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಬಸವ ಸೇವಾ ಪ್ರತಿಷ್ಠಾನದ ಪೂಜ್ಯ ಡಾ.ಗಂಗಾಂಬಿಕೆ ಅಕ್ಕ ಉದ್ಘಾಟಿಸಿ ಮಾತನಾಡಿ, ಕನ್ನಡ ಕೇವಲ ಭಾಷೆಯಲ್ಲ, ಎಲ್ಲರ ಉಸಿರು. ಕನ್ನಡದಲ್ಲೇ ವೈದ್ಯಕೀಯ ಶಿಕ್ಷಣ ಕಲಿಯಲು ಆದ್ಯತೆ ನೀಡಬೇಕು ಎಂದು ಒತ್ತಾಸೆ ವ್ಯಕ್ತಪಡಿಸಿದರು.
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಮಹೇಶ ಬಿರಾದಾರ್, ಬ್ರಿಮ್ಸ್ ಕನ್ನಡ ಸಂಘದ ಸಂಯೋಜಕ ಡಾ.ರಾಜಕುಮಾರ ಹೆಬ್ಬಾಳೆ ಮಾತನಾಡಿದರು. ಬ್ರಿಮ್ಸ್ ನಿರ್ದೇಶಕ ಡಾ.ಶಿವಕುಮಾರ ಶೆಟಕಾರ ಅಧ್ಯಕ್ಷತೆ ವಹಿಸಿದ್ದರು. ಬ್ರಿಮ್ಸ್ ಮುಖ್ಯ ಆಡಳಿತಾಕಾರಿ ಮಂಜುನಾಥ ಸ್ವಾಮಿ, ಪ್ರಾಚಾರ್ಯ ಡಾ.ರಾಜೇಶ ಪಾರಾ, ಸಹಾಯಕ ಪ್ರಾಧ್ಯಾಪಕಿ ಡಾ.ವರ್ಷಾ ಅಖಾಡೆ, ಕನ್ನಡ ಕಲೋತ್ಸವ ಮೇಲುಸ್ತುವಾರಿ ಅಧಿಕಾರಿ ಅಮೋಲ್ ಕಾಂಬ್ಳೆ ಇತರರಿದ್ದರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ, ಪದಕ ನೀಡಿ ಪ್ರೋತ್ಸಾಹಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net