

ಬೀದರ್: ರಾಜ್ಯ ಸರ್ಕಾರ ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಶೀಘ್ರ ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘ ಮುಖ್ಯಮಂತ್ರಿ ಅವರನ್ನು ಆಗ್ರಹಿಸಿದೆ.
ಕುಟುಂಬ ನಿರ್ವಹಣೆ, ಮಕ್ಕಳ ಶಿಕ್ಷಣ, ಮದುವೆ ಖರ್ಚು, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ನೌಕರರು ತೊಂದರೆಯಲ್ಲಿದ್ದಾರೆ ಎಂದು ಅಧ್ಯಕ್ಷ ಶಿವರಾಜ ಕಪಲಾಪುರೆ ತಿಳಿಸಿದ್ದಾರೆ.
ಏಳನೇ ವೇತನ ಆಯೋಗದ ಶಿಫಾರಸುಗಳು ಬೆಲೆ ಏರಿಕೆಯ ದಿನಮಾನಗಳಲ್ಲಿ ನೌಕರರಿಗೆ ಒಂದಿಷ್ಟು ಅನುಕೂಲ ಮಾಡಿಕೊಡಲಿವೆ. ಆದರೆ, ಶಿಫಾರಸು ಜಾರಿಗೆ ವಿಳಂಬ ಆಗುತ್ತಿರುವುದು ನೌಕರರಲ್ಲಿ ಬೇಸರ ಉಂಟು ಮಾಡಿದೆ ಎಂದು ಹೇಳಿದ್ದಾರೆ.
ಒಂದು ವರ್ಷದ ಹಿಂದೆಯೇ ವೇತನ ಆಯೋಗದ ಶಿಫಾರಸುಗಳು ಜಾರಿಗೆ ಬರಬೇಕಿತ್ತು. ಆದರೆ, ಕಾರಣಾಂತರದಿಂದ ಬಹಳ ತಡವಾಗಿದೆ. ಈಗ ಲೋಕಸಭೆ ಚುನಾವಣೆ ಸಹ ಮುಗಿದಿದೆ. ರಾಜ್ಯ ಸರ್ಕಾರ ಏಳನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಿ ನೌಕರರ ಬಹು ದಿನಗಳ ಬೇಡಿಕೆಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ.