

ಬೀದರ್: ಕಮಲನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ್ದು, ಈ ಘಟನೆಯನ್ನು ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಗಂಭೀರವಾಗಿ ಪರಿಗಣಿಸಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ ಎಂದು ಆಯೋಗದ ಸದಸ್ಯ ಶಶಿಧರ ಕೋಸಂಬೆ ತಿಳಿಸಿದ್ದಾರೆ. ಘಟನೆ ಸಂಬಂಧ ಡಿಡಿಪಿಐ ಅವರೊಂದಿಗೆ ಮಾತನಾಡಿದ್ದು, ಲೈಂಗಿಕ ದೌರ್ಜನ್ಯ ನಡೆಸಿದ ಶಿಕ್ಷಕನ ಮೇಲೆ ಸೂಕ್ತ ಕ್ರಮ ಕೈಗೊಂಡು ಆಯೋಗಕ್ಕೆ ಮಾಹಿತಿ ನೀಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಜಿಲ್ಲೆಯ ಅನೇಕ ಕಡೆಗಳಲ್ಲಿ ಮಕ್ಕಳ ಹಕ್ಕುಗಳ ಕಾಯ್ದೆ, ಪೋಕ್ಸೋ ಕಾಯ್ದೆ, ಬಾಲ ನ್ಯಾಯ ಕಾಯ್ದೆ ಕುರಿತು ಜಾಗೃತಿ ಮೂಡಿಸಿದ್ದರು ಸಹ ಕೆಲ ಕಡೆಗಳಲ್ಲಿ ಇಂಥ ಕೆಟ್ಟ ಪ್ರಕರಣಗಳು ನಡೆಯುತ್ತಿರುವುದು ದುರಂತದ ಸಂಗತಿ. ಹೀಗಾಗಿ ಬರುವ ದಿನಗಳಲ್ಲಿ ಶಿಕ್ಷಣ, ಪೊಲೀಸ್ ಹಾಗೂ ಸಂಬಂಧಿಸಿದ ಇಲಾಖೆಯವರು ಎಲ್ಲ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಈ ರೀತಿಯ ದುರ್ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.