

ಬೀದರ್: ಹಾಸ್ಟೆಲ್ ಪ್ರವೇಶ ಪ್ರಕ್ರಿಯೆ ವಿಳಂಬ ಹಾಗೂ ವಿದ್ಯಾರ್ಥಿ ವೇತನ ನೀಡದ ರಾಜ್ಯ ಸರ್ಕಾರದ ವಿರುದ್ಧ ನಗರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಪ್ರತಿಭಟನೆ ನಡೆಸಿತು.
ಗುಂಪಾ ರಿಂಗ್ ರೋಡ್ ವೃತ್ತದಲ್ಲಿ ಮಾನವ ಸರಪಳಿ ಮೂಲಕ ಸಂಚಾರ ತಡೆದ ಪ್ರತಿಭಟನಾಕಾರರು, ಹಾಸ್ಟೆಲ್ ಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ಕೂಡಲೆ ಪೂರ್ಣಗೊಳಿಸಿ ಪ್ರವೇಶ ನೀಡಬೇಕು. ರಾಜ್ಯದಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಇಲಾಖೆಗಳ ಹಾಸ್ಟೆಲ್ ಸಂಖ್ಯೆ ಹೆಚ್ಚಿಸಬೇಕು. ಬಾಕಿ ಉಳಿದಿರುವ ಹಿಂದಿನ ವರ್ಷದ ವಿದ್ಯಾರ್ಥಿ ವೇತನ ತಕ್ಷಣ ಅವರ ಖಾತೆಗೆ ಜಮೆ ಮಾಡಬೇಕು ಎಂದು ಒತ್ತಾಯಿಸಿದರು.
ಗ್ರಾಮೀಣ ಭಾಗದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ನಗರ ಪ್ರದೇಶಗಳಿಗೆ ಬರುತ್ತಾರೆ. ಕಾಲೇಜು ಮತ್ತು ಪ್ರೌಢ ಶಾಲೆಗಳು ಶುರುವಾಗಿ ಎರಡು ತಿಂಗಳಾದರೂ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ಸಿಗುತ್ತಿಲ್ಲ. ಇದರಿಂದ ಶಿಕ್ಷಣಕ್ಕೆ ಸಮಸ್ಯೆ ಆಗುತ್ತಿದೆ ಎಂದು ಕಿಡಿಕಾರಿದರು.
ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ತಕ್ಷಣ ಪೂರ್ಣಗೊಳಿಸಿ ವಸತಿನಿಲಯಗಳಲ್ಲಿ ಪ್ರವೇಶಾವಕಾಶ ಕಲ್ಪಿಸಬೇಕು. ವಿದ್ಯಾರ್ಥಿ ವೇತನ ಖಾತೆಗೆ ಜಮೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿದರು.
ರಾಜ್ಯ ಕಾರ್ಯಕಾರಿಣಿ ಸದಸ್ಯ ಸಾಯಿ, ಪವನ ಕುಂಬಾರ, ನಾಗರಾಜ ಸುಲ್ತಾನಪುರ, ಅಭಿಷೇಕ ಶಂಭು, ಮಹೇಶ, ಆನಂದ, ಶಶಿಕಾಂತ, ಪವನ ಪದ್ಮಾಕರ್, ಹರೀಶ ಇತರರಿದ್ದರು.