

ಬೀದರ್: ರಾಜ್ಯದಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ (ವಸತಿನಿಲಯ)ಗಳನ್ನು ಹೆಚಿಸಬೇಕು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನಗರದಲ್ಲಿ ಹೋರಾಟ ನಡೆಸಿತು.
ಡಾ.ಬಿ.ಆರ್. ಅಂಬೇಡ್ಕರ್ ವೃತ್ತ ಹತ್ತಿರದಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು, ಮಕ್ಕಳ ಸಂಖ್ಯೆಗೆ ಅನುಗುಣ ಹಾಸ್ಟೆಲ್ಗಳಿಲ್ಲ. ಇದರಿಂದ ಬಹಳಷ್ಟು ಮಕ್ಕಳು ವಸತಿನಿಲಯದಿಂದ ವಂಚಿತರಾಗುತ್ತಿದ್ದಾರೆ ಎಂದು ಕಿಡಿಕಾರಿದರು.
ಶಾಲಾ-ಕಾಲೇಜುಗಳು ಪ್ರಾರಂಭವಾಗುತ್ತಲೇ ವಸತಿನಿಲಯಗಳ ಪ್ರವೇಶ ಪ್ರಕ್ರಿಯೆ ನಡೆಸಬೇಕು. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಳಗ್ಗೆ ಹಾಗೂ ಸಂಜೆ ಬಸ್‌ಗಳ ಸಂಖ್ಯೆ ಹೆಚ್ಚಿಸಬೇಕು. ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಿಗೆ ಏಕರೂಪ ಶೈಕ್ಷಣಿಕ ವೇಳಾಪಟ್ಟಿ ಜಾರಿ ಮಾಡಬೇಕು. ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣ ಅರ್ಜಿ ಸಲ್ಲಿಸಿದ ತಕ್ಷಣ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಿಸಬೇಕು. ಹಾಸ್ಟೆಲ್ ಗಳಲ್ಲಿ ಮೂಲಸೌಲಭ್ಯ ಕಲ್ಪಿಸಲು ಒತ್ತು ನೀಡಬೇಕು. ಬಾಡಿಗೆ ಕಟ್ಟಡದಲ್ಲಿರುವ ಹಾಸ್ಟೆಲ್ಗಳಿಗೆ ಸ್ವಂತ ಕಟ್ಟಡ ನಿರ್ಮಿಸಬೇಕು. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಮೀಸಲಿರುವ ಎಸ್ಸಿಪಿ, ಟಿಎಸ್ಪಿ ಅನುದಾನ ಬೇರೆಡೆ ಬಳಸಿರುವ ಕುರಿತು ಸರ್ಕಾರ ಸ್ಪಷ್ಟನೆ ಕೊಡಬೇಕು ಎಂದು ಒತ್ತಾಯಿಸಿದರು.
ಎಬಿವಿಪಿ ಜಿಲ್ಲಾ ಸಂಚಾಲಕ ಶಶಿಕಾಂತ ರ್ಯಾಕಲೆ, ಸಂಘಟನಾ ಕಾರ್ಯದರ್ಶಿ ಹೇಮಂತ ಎ., ತಾಲೂಕು ಸಂಚಾಲಕ ಮಹೇಶ, ನಗರ ಕಾರ್ಯದರ್ಶಿ ಆನಂದ, ಪ್ರಮುಖರಾದ ಪವನ್ ಕುಂಬಾರ, ನಾಗರಾಜ ಸುಲ್ತಾನಪುರ, ಅಭಿಷೇಕ ಶಂಭು, ಅಂಬರೀಶ ಬಿರಾದಾರ್, ಪದ್ಮಾಕರ, ಕಾವೇರಿ ಮಠಪತಿ, ಪ್ರಾರ್ಥನಾ, ಮಮತಾ ಇತರರಿದ್ದರು.