ಸರ್ಕಾರಿ ನೌಕರರ ಬೇಡಿಕೆ ಈಡೇರಿಸಿ

12blk1
Published on

ಭಾಲ್ಕಿ: ಸರ್ಕಾರಿ ನೌಕರರ ಏಳನೇ ವೇತನ ಆಯೋಗ ಜಾರಿ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕ ಆಗ್ರಹಿಸಿದೆ.
ನೌಕರರ ಸಂಘದ ತಾಲೂಕಾಧ್ಯಕ್ಷ ರಾಜಪ್ಪ ಪಾಟೀಲ್ ನೇತೃತ್ವದಲ್ಲಿ ಪಟ್ಟಣದಲ್ಲಿ ಸಿಎಂ ಅವರಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್ ಅವರಿಗೆ ಸಲ್ಲಿಸಿ, ಆರನೇ ವೇತನ ಆಯೋಗ ಜಾರಿಗೊಂಡು 2022ಕ್ಕೆ ಐದು ವರ್ಷ ಪೂರ್ಣಗೊಂಡಿವೆ. ಆದರೆ ಈವರೆಗೂ ವೇತನ, ಭತ್ಯೆ ಪರಿಷ್ಕರಣೆಗೊಂಡಿಲ್ಲ. ಹೀಗಾಗಿ ಕೂಡಲೇ ಏಳನೇ ವೇತನ ಆಯೋಗ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ನೂತನ ಪಿಂಚಣಿ ಯೋಜನೆ ರದ್ದು ಪಡಿಸುವಂತೆ ಹೋರಾಟ ಮಾಡಿಕೊಂಡು ಬರಲಾಗುತ್ತಿದೆ. ಈ ಹಿಂದೆ ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯಲ್ಲಿ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸುವ ಭರವಸೆ ನೀಡಿತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ವರ್ಷ ಕಳೆದರೂ ನೂತನ ಪಿಂಚಣಿ ಯೋಜನೆ ರದ್ದು ಪಡಿಸಿಲ್ಲ ಹಾಗೂ ಆರೋಗ್ಯ ಸಂಜೀವಿನಿ ಯೋಜನೆ ಕೂಡ ಅನುಷ್ಠಾನಗೊಂಡಿಲ್ಲ. ಕೂಡಲೇ ಸರ್ಕಾರಿ ನೌಕರರ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಲಾಗಿದೆ.
ತಾಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸೂರ್ಯಕಾಂತ ಸುಂಟೆ, ಪ್ರಮುಖರಾದ ದತ್ತು ಕಾಟಕರ್, ಬಸವರಾಜ ಮರೆ, ನಾಗಭೂಷಣ ಮಾಮಡಿ, ಕುಪೇಂದ್ರ ಜಗಶೆಟ್ಟೆ, ಪ್ರಕಾಶ ಮಹಾಗಾಂವೆ, ವಿಶ್ವನಾಥ, ಸಹಾದೇವ, ಶಿವಕುಮಾರ, ಅರವಿಂದ ಪಾಟೀಲ್, ಅಶೋಕ ಕುಂಬಾರ, ತಾನಾಜಿ, ರವಿ, ಉತ್ತಮ, ಅಶೋಕ ಬಿರಾದಾರ್, ಅಶೋಕ ತಾಂಬೂಳೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net