

ಬೀದರ್: ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಜೆಪಿ-ಜೆಡಿಎಸ್ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಹಮ್ಮಿಕೊಂಡಿದ್ದ ಮೈಸೂರು ಚಲೋ ಪಾದಯಾತ್ರೆಯಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.
ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷರಡ್ಡಿ ನೇತೃತ್ವದ ತಂಡ ಕಳೆದ ಐದು ದಿನಗಳಿಂದ ಪಾದಯಾತ್ರೆಯಲ್ಲಿ ಭಾಗಿಯಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಡಾ.ಶೈಲೇಂದ್ರ ಬೆಲ್ದಾಳೆ ಇತರ ನಾಯಕರ ಜತೆ ಯುವ ಮೋರ್ಚಾ ಕಾರ್ಯಕರ್ತರು ಹೆಜ್ಜೆ ಹಾಕಿ, ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ವಿರುದ್ಧ ಘೋಷಣೆ ಕೂಗಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಮುಡಾ ನಿವೇಶನ ಹಂಚಿಕೆ ಮತ್ತು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ದೊಡ್ಡಮಟ್ಟದ ಅಕ್ರಮ ನಡೆದಿದೆ. ಇದರ ಹೊಣೆ ಹೊತ್ತು ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.