ಮಕ್ಕಳ ರಕ್ಷಣಾ ನೀತಿ ಕಡ್ಡಾಯ ಜಾರಿಗೆ ತನ್ನಿ

Rangmandir
Published on

ಬೀದರ್: ಮಕ್ಕಳ ರಕ್ಷಣಾ ನೀತಿ-2016 ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ ಪರಿಣಾಮಕಾರಿ ಮತ್ತು ಕಡ್ಡಾಯ ಜಾರಿಗೆ ತರುವ ಮೂಲಕ ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು.
ನಗರದ ಪೂಜ್ಯ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರಲ್ಲಿ ಆಯೋಜಿಸಿದ್ದ ಮಿಷನ್ ವಾತ್ಸಲ್ಯ ಯೋಜನೆ, ಮಕ್ಕಳ ರಕ್ಷಣಾ ನೀತಿ-2016 ಮತ್ತು ಮಕ್ಕಳಿಗೆ ಸಂಬಂಸಿದ ಕಾನೂನುಗಳ ಕುರಿತು ಪದವಿಪೂರ್ವ ಕಾಲೇಜು ಪ್ರಾಂಶುಪಾಲರು ಮತ್ತು ವಿವಿಧ ಇಲಾಖೆಯಡಿ ನಡೆಯುವ ವಸತಿ ಶಾಲೆ, ನಿಲಯಗಳ ಪ್ರಾಂಶುಪಾಲರು ಮತ್ತು ವಾರ್ಡನ್ ಗಳ ತರಬೇತಿ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದ ವಿವಿಧೆಡೆ ಮಕ್ಕಳ ಮೇಲೆ ಅಮಾನವೀಯ ಘಟನೆಗಳು ನಡೆಯುತ್ತಿವೆ. ಮಕ್ಕಳ ರಕ್ಷಣಾ ನೀತಿ ಪಾಲಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಮಕ್ಕಳಿಗೆ ಮನೆ ನಂತರದ ಸುರಕ್ಷಿತ ಸ್ಥಳ ಶಾಲೆಗಳಾಗಬೇಕು. ಮಕ್ಕಳ ರಕ್ಷಣಾ ನೀತಿ ಪಾಲನೆ ಮಾಡುವಂತೆ ಹೈಕೋರ್ಟ್ ಒಂದು ವರ್ಷದ ಹಿಂದೆ ಆದೇಶಿಸಿದ್ದು, ಎಲ್ಲ ಶಾಲಾ-ಕಾಲೇಜುಗಳಲ್ಲಿ ಪಾಲಿಸಬೇಕು ಎಂದು ಹೇಳಿದರು.
ಮಕ್ಕಳು ದೇಶದ ಆಸ್ತಿ. ಅವರ ಹಕ್ಕುಗಳ ಉಲ್ಲಂಘನೆ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ. ದೌರ್ಜನ್ಯವಾದಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಗಂಭೀರ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಕೆಲಸ ಮಾಡುತ್ತಿದೆ. ಶಾಲಾ- ಕಾಲೇಜುಗಳಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗದಂತೆ ನೋಡಿಕೊಳ್ಳುವ ಅಗತ್ಯವಿದೆ ಎಂದರು.
ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಂದ್ರಕಾಂತ ಶಾಬಾದಕರ್ ಮಾತನಾಡಿ, ಶಿಕ್ಷಕರಿಗೆ ಸಮಾಜದಲ್ಲಿ ಗೌರವಯುತ ಸ್ಥಾನವಿದೆ. ಅದನ್ನು ಉಳಿಸಿಕೊಂಡು ಹೋಗಬೇಕು. ಎಲ್ಲೂ ಮಕ್ಕಳ ಮೇಲೆ ದೌರ್ಜನ್ಯ ನಡೆಯದಂತೆ ಎಚ್ಚರ ವಹಿಸಬೇಕು. ಒಂದು ವೇಳೆ ಆದರೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ನಾನೇ ಖುದ್ದಾಗಿ ದೂರ ನೀಡಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಮಾಡುವೆ. ಜಿಲ್ಲೆಯ 186 ಪದವಿಪೂರ್ವ ಕಾಲೇಜುಗಳಲ್ಲಿ ಇಂಥ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.
ಡಾ.ಕೆ. ರಾಘವೇಂದ್ರ ಭಟ್ ವಿಶೇಷ ಉಪನ್ಯಾಸ ನೀಡಿ, ಮಕ್ಕಳ ಹಕ್ಕುಗಳ ಕುರಿತು ಸಂಪೂರ್ಣ ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀಧರ ಮಾತನಾಡಿ, ಮಕ್ಕಳ ಪಾಲನೆ ಮತ್ತು ಪೋಷಣೆ ಮಿಷನ್ ಇಂದ್ರಧನುಷ್ ಯೋಜನೆ ಉದ್ದೇಶವಾಗಿದೆ. ಹಲವಾರು ಕಾಯ್ದೆ, ಕಾನೂನು ಜಾರಿಗೆ ಬಂದರೂ ಅಪರಾಧಗಳ ಸಂಖ್ಯೆ ಕಡಿಮೆಯಾಗಿಲ್ಲ. ನೈತಿಕ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಶಾಲೆಗಳಲ್ಲಿ ಮಾತ್ರವಲ್ಲದೆ ಮನೆಗಳಲ್ಲಿ ಪಾಲಕರು ತಮ್ಮ ಮಕ್ಕಳಿಗೆ ಮಾನವೀಯ ಮೌಲ್ಯಗಳ ಕುರಿತು ತಿಳಿಸಬೇಕು ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಸಿಂಧು ಎಚ್.ಎಸ್., ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸಂಗೀತಾ ಪಾಟೀಲ್, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಅವಿನಾಶ, ಶಿಕ್ಷಣಾಧಿಕಾರಿ ಗುಂಡಪ್ಪ, ಶಾರದಾ ಕಲ್ಮಲಕರ್, ಧನಲಕ್ಷ್ಮೀ ಪಾಟೀಲ್, ಗೌರಿಶಂಕರ ಪರತಾಪುರ ಇತರರಿದ್ದರು.
ಮಕ್ಕಳ ರಕ್ಷಣಾ ನಿರ್ದೇಶನಾಲಯ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಡಿ ಕಾರ್ಯಕ್ರಮ ಸಂಘಟಿಸಲಾಗಿತ್ತು.

ಪ್ರತಿ ನಿಮಿಷಕ್ಕೆ ಮೂರು ಬಾಲ್ಯವಿವಾಹ
ದೇಶದಲ್ಲಿ 1929ರಿಂದ ಬಾಲ್ಯವಿವಾಹ ನಿಷೇಧ ಜಾರಿಯಲ್ಲಿದ್ದರೂ ಪ್ರತಿ ನಿಮಿಷಕ್ಕೆ ಮೂರು ಬಾಲ್ಯ ವಿವಾಹ ನಡೆಯುತ್ತಿವೆ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಕಳವಳ ವ್ಯಕ್ತಪಡಿಸಿದರು. ಮಕ್ಕಳು ಶಾಲೆಗೆ ಬರದಿದ್ದರೆ ಯಾಕೆ ಬರಲಿಲ್ಲ ಎಂಬ ಮಾಹಿತಿಯನ್ನು ಶಿಕ್ಷಕರು ಸಂಗ್ರಹಿಸಬೇಕು. ಶಾಲಾ-ಕಾಲೇಜುಗಳಲ್ಲಿ ಸಮಿತಿ ರಚಿಸಿ ಮಕ್ಕಳ ಸಮಸ್ಯೆಗಳನ್ನು ಆಲಿಸುತ್ತಿರಬೇಕು ಹಾಗೂ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅಥವಾ 112 ಶಾಲೆಗಳಲ್ಲಿ ಕಡ್ಡಾಯವಾಗಿ ಬರೆಯಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net