ಪ್ರಗತಿ ಕಾಮಗಾರಿ ಪೂರ್ಣಗೊಳಿಸಿ

Dr Shailebder Beldale
Published on

ಬೀದರ್: ಪ್ರಗತಿಯಲ್ಲಿರುವ ವಿವಿಧ ಇಲಾಖೆ ಅಭಿವೃದ್ಧಿ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಸೂಚಿಸಿದರು.
ಚಿಟ್ಟಗುಪ್ಪ ತಾಲೂಕು ವ್ಯಾಪ್ತಿಯ ಬೀದರ್ ದಕ್ಷಿಣ ಕ್ಷೇತ್ರದ ಗ್ರಾಮಗಳ ಅಭಿವೃದ್ಧಿ ಪರಿಶೀಲನೆ ಕುರಿತು ನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅಭಿವೃದ್ಧಿಗೆ ಹೆಚ್ಚಿನ ನೀಡಬೇಕು ಎಂದರು.
ಅಭಿವೃದ್ಧಿ ಮತ್ತು ಆಡಳಿತಕ್ಕೆ ಚುರುಕು ನೀಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮೂಲಸೌಕರ್ಯ ಒದಗಿಸಬೇಕು. ಹಳ್ಳಿಗಳಲ್ಲಿ ಯಾವುದೇ ರೀತಿಯ ಸಮಸ್ಯೆ ಇದ್ದರೂ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು. ಮಳೆಗಾಲ ಹಿನ್ನೆಲೆಯಲ್ಲಿ ಜನಸಾಮಾನ್ಯರ ಆರೋಗ್ಯ ಹಿತದೃಷ್ಟಿಯಿಂದ ಎಲ್ಲ ಗ್ರಾಮಗಳಲ್ಲಿ ವೈದ್ಯರು ಜನಜಾಗೃತಿ ಮೂಡಿಸಬೇಕು ಎಂದು ತಾಕೀತು ಮಾಡಿದರು.
ಜೆಜೆಎಂ ಕಾಮಗಾರಿಯಲ್ಲಿ ಕಳಪೆ ಕಂಡುಬಂದಲ್ಲಿ ಶೀಘ್ರ ನೋಟಿಸ್ ಜಾರಿಗೊಳಿಸಬೇಕು. ಪ್ರತಿಯೊಂದು ಗ್ರಾಮದಲ್ಲಿ ಕುಡಿಯುವ ನೀರು ಸಮರ್ಪಕ ಪೂರೈಸಲು ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಕಂದಾಯ ಅಧಿಕಾರಿಗಳು ಮಳೆಯಿಂದಾಗಿ ಮನೆ ಬಿದ್ದು ಹಾನಿ ಉಂಟಾಗಿರುವ ಸಮೀಕ್ಷೆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ಸೂಚಿಸಿದರು.
ಚಿಟಗುಪ್ಪ ತಹಸೀಲ್ದಾರ್ ಮಂಜುನಾಥ, ತಾಪಂ ಇಒ ಲಕ್ಷ್ಮೀ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net