

ಬೀದರ್: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ಸೆ.15ರಂದು ಹಮ್ಮಿಕೊಂಡಿರುವ ಮಾನವ ಸರಪಳಿ ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ನಗರದಲ್ಲಿ ಹಮ್ಮಿಕೊಂಡಿದ್ದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿ, ಬಸವಕಲ್ಯಾಣ ಅನುಭವ ಮಂಟಪದಿಂದ ಪ್ರಾರಂಭಗೊಂಡು ಚಾಮರಾಜನಗರ ಜಿಲ್ಲೆಯವರೆಗೆ ಮಾನವ ಸರಪಳಿ ನಿರ್ಮಿಸಲಾಗುತ್ತಿದೆ. ಎಲ್ಲ ಇಲಾಖೆಗಳ ಸಹಕಾರದಿಂದ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಬೇಕು. ನಿಗದಿಪಡಿಸಿದ ಕಿಲೋ ಮೀಟರ್ ವರೆಗೆ ಶಾಲಾ-ಕಾಲೇಜಿನ ಮಕ್ಕಳನ್ನು ಬೆಳಗ್ಗೆ 8.30ಕ್ಕೆ ಇರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಅನುಭವ ಮಂಟಪದಿಂದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಜಿಲ್ಲೆಯಲ್ಲಿ 45 ಕಿ.ಮೀಟರ್ ಮಾನವ ಸರಪಳಿ ರಚಿಸುವ ಜತೆಗೆ 1 ಕಿ.ಮೀ. ಉದ್ದದ ರಾಜ್ಯದ ಹಾಗೂ ರಾಷ್ಟ್ರದ ಧ್ವಜವನ್ನು ಹಿಡಿದು ಮಕ್ಕಳು ಮುನ್ನಡೆಯುವರು. ಒಂದು ಕಿ.ಮೀ.ಗೆ ಒಬ್ಬ ಅಧಿಕಾರಿಯನ್ನು ನಿಯೋಜಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹೇಳಿದರು.
ಜಿಪಂ ಸಿಇಒ ಡಾ.ಗಿರೀಶ್ ಬದೋಲೆ ಮಾತನಾಡಿ, ರೋಟರಿ ಕ್ಲಬ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಮಾನವ ಸರಪಳಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಕಾರಿ ಚಂದ್ರಕಾಂತ ಪೂಜಾರಿ ಮಾತನಾಡಿ, ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವ ಜತೆಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಹೇಳಿದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಇಲಾಖೆ ಉಪ ನಿರ್ದೇಶಕಿ ಸುರೇಖಾ, ಸಮಾಜ ಕಲ್ಯಾಣ ಉಪ ನಿರ್ದೇಶಕಿ ಸಿಂಧು ಎಚ್.ಎಸ್, ಡಿಡಿಪಿಯು ಚಂದ್ರಕಾಂತ ಶಾಬಾದಕರ್, ಡಿಡಿಪಿಐ ಸಲೀಮ್ ಪಾಷಾ ಇತರರಿದ್ದರು.