

ಔರಾದ್: ನಾಗೂರ(ಬಿ) ಗ್ರಾಮದಲ್ಲಿ ನಿರ್ಮಿಸುತ್ತಿರುವ 220 ಕೆವಿ ವಿದ್ಯುತ್ ಉಪ ಕೇಂದ್ರದ ಕಾಮಗಾರಿ ಕಳಪೆಯಾಗಿದ್ದು, ತನಿಖೆ ನಡೆಸುವಂತೆ ಶಾಸಕ ಪ್ರಭು ಚವ್ಹಾಣ್ ಒತ್ತಾಯಿಸಿದ್ದಾರೆ.
ಇಂಧನ ಸಚಿವ ಕೆ.ಜೆ. ಜಾಜ್೯, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವ ಅವರು, ಔರಾದ್ ತಾಲೂಕು ಮಹಾರಾಷ್ಟ್ರ-ತೆಲಂಗಾಣ ಗಡಿ ಭಾಗದಲ್ಲಿದ್ದು, ನಂಜುಂಡಪ್ಪ ವರದಿಯಂತೆ ಅತ್ಯಂತ ಹಿಂದುಳಿದ ಪ್ರದೇಶ. ನಾಗೂರ(ಬಿ)ದಲ್ಲಿ 118 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ 220 ಕೆವಿ ವಿದ್ಯುತ್ ಉಪ ಕೇಂದ್ರ ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕಾಮಗಾರಿಗೆ ಮಂಜೂರಾತಿ ಸಿಕ್ಕಿತ್ತು. ಪ್ರಥಮ ಬಾರಿಗೆ ನನ್ನ ಕ್ಷೇತ್ರದಲ್ಲಿ 220 ಕೆವಿ ವಿದ್ಯುತ್ ಉಪ ಕೇಂದ್ರ ನಿರ್ಮಾಣಗೊಳ್ಳುತ್ತಿದೆ. ಆದರೆ ಅಂದಾಜು ಪಟ್ಟಿಯಂತೆ ಕೆಲಸ ಆಗುತ್ತಿಲ್ಲ. ಕಾಮಗಾರಿಯಲ್ಲಿ ಹೊಸ ಬದಲು ಹಳೆಯ ಉಪಕರಣಗಳನ್ನು ಬಳಸಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ ಎಂದು ಪತ್ರದಲ್ಲಿ ಗಮನ ಸೆಳೆದಿದ್ದಾರೆ.
ಕೆಲಸ ಕಳಪೆಯಾಗಿದ್ದರಿಂದ ಸಣ್ಣಪುಟ್ಟ ಕಾರ್ಖಾನೆ ಆರಂಭಿಸಲು ತೊಂದರೆಯಾಗುತ್ತದೆ. ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಶಾಮೀಲಾಗಿ ಗುತ್ತಿಗೆ ಹಣ ಬಿಡುಗಡೆ ಮಾಡುತ್ತಿರುವ ಆರೋಪಗಳಿವೆ. ಈ ಹಿಂದೆಯೇ ಕಾಮಗಾರಿ ಗುಣಮಟ್ಟ ಸರಿಯಾಗಿಲ್ಲ ಎಂದು ಸಚಿವರು ಮತ್ತು ಅಧಿಕಾರಿಗಳ ಗಮನಕ್ಕೆ ತಂದರೂ ಕ್ರಮ ಕೈಗೊಂಡಿಲ್ಲ. ಈಗಲಾದರೂ ಕಾಮಗಾರಿ ಕುರಿತು ಥಡ್೯ ಪಾರ್ಟಿಯಿಂದ ತನಿಖೆ ನಡೆಸಲು ಆದೇಶಿಸಬೇಕೆಂದು ಕೋರಿದ್ದಾರೆ.
ಕ್ಷೇತ್ರದಲ್ಲಿ ಕೈಗಾರಿಕೆಗಳಿಗೆ ಉತ್ತೇಜನ ನೀಡಲು ಸಾಕಷ್ಟು ಶ್ರಮ ವಹಿಸುತ್ತಿರುವೆ. ಇದಕ್ಕೆ ಮುಖ್ಯವಾಗಿ ಬೇಕಿರುವ ರಸ್ತೆ, ವಿದ್ಯುತ್, ಕುಡಿಯುವ ನೀರು ಸರಬರಾಜು ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ನಾಗೂರ(ಬಿ) ಉಪ ಕೇಂದ್ರ ಕಾಮಗಾರಿ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿ ಕೆಲಸ ಸರಿಯಾಗಿ ಮಾಡುವಂತೆ ಸೂಚಿಸಿದ್ದರೂ ಯಾವುದೇ ಕ್ರಮ ಜರುಗಿಸದಿರುವುದರಿಂದ ಮತ್ತೊಮ್ಮೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಚವ್ಹಾಣ್ ತಿಳಿಸಿದ್ದಾರೆ.