ರಾಜ್ಯೋತ್ಸವಕ್ಕೆ ಕನ್ನಡಿಗರಿಗೆ ಮಹಿಷಿ ವರದಿ ಕೊಡುಗೆ ನೀಡಲಿ

Somnath Mudhool
Published on

ಬೀದರ್: ರಾಜ್ಯ ಸರ್ಕಾರವು ಈ ಬಾರಿಯ ಕನ್ನಡ ರಾಜ್ಯೋತ್ಸವಕ್ಕೆ ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವ ಮೂಲಕ ಕನ್ನಡಿಗರಿಗೆ ಕೊಡುಗೆ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ ಒತ್ತಾಯಿಸಿದ್ದಾರೆ.
ಸರ್ಕಾರಿ, ಖಾಸಗಿ ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಬೇಕೆಂಬ ಕನ್ನಡಿಗರ ನಾಲ್ಕು ದಶಕಗಳ ಬೇಡಿಕೆ ಈವರೆಗೂ ಈಡೇರಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ವರದಿ ಜಾರಿಗೆ ಆಗ್ರಹಿಸಿ ವೇದಿಕೆ ಸೆಪ್ಟೆಂಬರ್ 1 ರಂದು ನಾಡಿನಾದ್ಯಂತ ಹೋರಾಟ ನಡೆಸಿತು. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ವರದಿ ಜಾರಿಗೊಳಿಸಲು ಸಹ ತೀರ್ಮಾನಿಸಲಾಗಿತ್ತು. ಆದರೆ, ನಂತರ ಬೇರೆ ರಾಜ್ಯಗಳ ಕಂಪನಿಗಳ ಒತ್ತಡಕ್ಕೆ ಮಣಿದು ಸರ್ಕಾರ ವರದಿ ಜಾರಿಗೆ ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.
ಸದ್ಯ ಕನ್ನಡ ನೆಲದಲ್ಲೇ ಕನ್ನಡಿಗರು ಉದ್ಯೋಗಕ್ಕಾಗಿ ಅಲೆದಾಡುವ ಪರಿಸ್ಥಿತಿ ಉಂಟಾಗಿದೆ. ಕನ್ನಡಿಗರ ಮಕ್ಕಳಿಗೆ ಉದ್ಯೋಗ ದೊರಕುವಂತಾಗಲು ಹಾಗೂ ಅವರ ಭವಿಷ್ಯ ಉಜ್ವಲವಾಗಲು ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವುದು ಅವಶ್ಯಕವಾಗಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾಸಗಿ ಕಂಪನಿಗಳ ಒತ್ತಡಕ್ಕೆ ಮಣಿಯಬಾರದು. ಕನ್ನಡಿಗರ ವರದಿ ಜಾರಿಯ ಬೇಡಿಕೆ ಈಡೇರಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net