

ಔರಾದ್: ಕಾರಂಜಾ ಜಲಾಶಯದಿಂದ ಔರಾದ್ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಕಾಮಗಾರಿ ಆರಂಭಿಸಲು ವಿಳಂಬವಾಗುತ್ತಿರುವುದಕ್ಕೆ ಶಾಸಕ ಪ್ರಭು ಚವ್ಹಾಣ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಟ್ಟಣದಲ್ಲಿ ಪ್ರತಿವರ್ಷ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತದೆ. ಬೇಸಿಗೆಯಲ್ಲಿ ಸಮಸ್ಯೆ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹಲವು ವರ್ಷಗಳಿಂದ ಶ್ರಮಿಸುತ್ತಿದ್ದೇನೆ. ಹಿಂದೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಅಮೃತ-2 ಯೋಜನೆಯಡಿ 84.82 ಕೋಟಿ ಅನುದಾನ ಮಂಜೂರು ಮಾಡಿಸಿದ್ದೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯೋಜನೆಯಡಿ ಔರಾದ್ ಪಟ್ಟಣಕ್ಕೆ ಕಾರಂಜಾದಿಂದ ಪೈಪ್ಲೈನ್ ಮೂಲಕ ನೀರು ಸರಬರಾಜು ಮಾಡಲಾಗುತ್ತದೆ. ಕಾಮಗಾರಿ ಪೂರ್ಣಗೊಂಡ ನಂತರ ಪಟ್ಟಣದಲ್ಲಿ ನೀರಿನ ಸಮಸ್ಯೆ ಇರುವುದಿಲ್ಲ. ಹೀಗಾಗಿ ಕೆಲಸ ಶೀಘ್ರ ಆರಂಭಿಸಬೇಕೆಂದು ನಗರಾಭಿವೃದ್ಧಿ ಸಚಿವರು, ಸರ್ಕಾರದ ಪ್ರಧಾನ ಕಾರ್ಯದರ್ಶಿ ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ಹಿಂದೆ ಪತ್ರ ಬರೆದಿದ್ದರೂ ಪ್ರಯೋಜನವಾಗದ್ದರಿಂದ ಮತ್ತೊಮ್ಮೆ ಮನವಿಪತ್ರ ಸಲ್ಲಿಸಲಾಗಿದೆ ಎಂದಿದ್ದಾರೆ.
ಟೆಂಡರ್ ನಡೆದು ವರ್ಷಕ್ಕಿಂತ ಹೆಚ್ಚು ಸಮಯವಾದರೂ ಗುತ್ತಿಗೆದಾರರು ಇಂದಿಗೂ ಸ್ಥಳಕ್ಕೆ ಬಂದು ಕೆಲಸ ಆರಂಭಿಸಿಲ್ಲ. ಔರಾದ್ ಕ್ಷೇತ್ರದಲ್ಲಿ ಹೀಗೆ ಸಾಕಷ್ಟು ಕಾಮಗಾರಿಗಳು ಆರಂಭಗೊಂಡಿಲ್ಲ. ಅಭಿವೃದ್ಧಿ ಕೆಲಸಗಳಿಂದ ಯಾರಿಗೆ ತೊಂದರೆಯಾಗುತ್ತಿದೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ನಿಗದಿತ ಸಮಯಕ್ಕೆ ಕೆಲಸ ಆರಂಭಿಸದ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಜರುಗಬೇಕು. ಔರಾದ್ ಜನತೆಗೆ ಈ ಕಾಮಗಾರಿ ಅತ್ಯಂತ ಅವಶ್ಯಕವಾಗಿದ್ದು, ಇನ್ಮುಂದೆ ಯಾವ ಕಾರಣಕ್ಕೂ ವಿಳಂಬ ಮಾಡದೆ ಕಾಮಗಾರಿ ಶೀಘ್ರ ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.